ಸರಗಳ್ಳನ ಬಂಧನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಜಪ್ತಿ

| Published : May 04 2024, 01:35 AM IST / Updated: May 04 2024, 04:33 AM IST

ಸರಗಳ್ಳನ ಬಂಧನ: ₹2 ಲಕ್ಷ ಮೌಲ್ಯದ ಚಿನ್ನದ ಸರ ಜಪ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಹಾಡಹಗಲೇ ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು :  ಹಾಡಹಗಲೇ ಮಹಿಳೆಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹನುಮಂತನಗರದ ರಮೇಶ್‌(40) ಬಂಧಿತ. ಆರೋಪಿಯಿಂದ 2 ಲಕ್ಷ ರು. ಮೌಲ್ಯದ 35 ಗ್ರಾಂ ತೂಕದ ಚಿನ್ನದ ಸರ ಜಪ್ತಿ ಮಾಡಲಾಗಿದೆ. ಏ.19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದ ಅಪರಿಚಿತ ಏಕಾಏಕಿ ಆ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಮೂಲದ ಆರೋಪಿ ರಮೇಶ್‌ ವೃತ್ತಿಯಲ್ಲಿ ಚಾಲಕನಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ. ಕುಡಿತದ ದಾಸನಾಗಿದ್ದ ಈತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಹೀಗಾಗಿ ಕಳೆದ ಮೂರ್ನಾಲ್ಕು ತಿಂಗಳಿಂದ ಕೆಲಸ ಇಲ್ಲದೆ ಮದ್ಯ ಸೇವನೆ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದ. ತನ್ನ ಚಟಕ್ಕೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯ ಸರ ಕಸಿದು ಪರಾರಿಯಾಗಿದ್ದ.

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಘಟನಾ ಸ್ಥಳ ಹಾಗೂ ಸುತ್ತಮುತ್ತಲ ರಸ್ತೆಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಸಿಕ್ಕ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.