ಬಳ್ಳಾರಿ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಜ್ಜು

| Published : May 05 2024, 02:05 AM IST

ಸಾರಾಂಶ

ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದೆ. ಮೇ 5 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಚುನಾವಣೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಲೋಕಸಭಾ ಚುನಾವಣೆಗೆ ಮೇ 7ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಅಂದರೆ ಮೇ 5 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು ಎಂದರು.

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದರು.

ಸಿಸಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ವ್ಯವಸ್ಥೆ:

ಜಿಲ್ಲೆಯ 1219 ಮತಗಟ್ಟೆಗಳ ಪೈಕಿ 299 ಸೂಕ್ಷ್ಮ ಹಾಗೂ 69 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ 610 ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಸಿಸಿಟಿವಿ ಕ್ಯಾಮೆರಾ ಮೂಲಕ ನೇರವಾಗಿ ಮತಗಟ್ಟೆಗಳ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಎಎಸ್ಪಿ ನವೀನಕುಮಾರ್ ಮಾತನಾಡಿ, ಮತದಾನ ದಿನದಂದು ಭದ್ರತೆಗೆ 2,048 ಪೊಲೀಸ್ ಅಧಿಕಾರಿ, ಸಿಬ್ಬಂದಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಯಿಂದ ಸುಮಾರು 850 ಪೊಲೀಸ್ ಸಿಬ್ಬಂದಿ ಭದ್ರತಾ ಕಾರ್ಯಕ್ಕೆ ಜಿಲ್ಲೆಗೆ ಆಗಮಿಲಿವೆ. ಜಿಲ್ಲೆಗೆ ಸಿಆರ್‌ಪಿಎಫ್ ಪಡೆಯ ಮೂರು ತಂಡಗಳು ಜಿಲ್ಲೆಗೆ ಆಗಮಿಸಿವೆ. 24 ಚೆಕ್‍ಪೋಸ್ಟ್‌ಗಳಲ್ಲಿ ನಿರಂತರ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮತದಾನ ಸಮಯದಲ್ಲಿ ಅಹಿತಕರ ಘಟನೆ ಸೃಷ್ಟಿಸುವಂತಹ 11 ರೌಡಿಶೀಟರ್ ಪ್ರಕರಣಗಳಲ್ಲಿ 9 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಘೊಷಣೆಯ ಬಳಿಕ ಈವರೆಗೆ ಜಿಲ್ಲೆಯಲ್ಲಿ ₹8.41 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.

ಎಡಿಸಿ ಮೊಹಮ್ಮದ್ ಝುಬೇರ್ ಸುದ್ದಿಗೋಷ್ಠಿಯಲ್ಲಿದ್ದರು.