ಆತಂಕವಿಲ್ಲದೇ ಧೈರ್ಯದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ

| Published : May 07 2024, 01:12 AM IST

ಆತಂಕವಿಲ್ಲದೇ ಧೈರ್ಯದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ.

ಧಾರವಾಡ:

ಮತಗಟ್ಟೆ ಸಿಬ್ಬಂದಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿ ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಇಲ್ಲಿಯ ಆರ್‌ಎಲ್‌ಎಸ್‌ ಪದವಿ ಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಶಾಲೆಗಳ ಆವರಣದಲ್ಲಿ ಸೋಮವಾರ ಅಚ್ಚುಕಟ್ಟಾಗಿ ನೆರವೇರಿತು.

ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜು ಆವರಣಕ್ಕೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು. ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.

ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್‌ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್‌ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‌ವಾರು ಕೊಠಡಿ ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.