ಅಂಗವಿಕಲರಿಗೆ ವಾಹನ ವ್ಯವಸ್ಥೆಗೆ ಸಕ್ಷಮ ಆ್ಯಪ್‌ ಸಹಾಯ

| Published : Apr 06 2024, 12:48 AM IST / Updated: Apr 26 2024, 08:05 AM IST

ಸಾರಾಂಶ

ಯುವ ಮತದಾರರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಗುರುವಾರ ಕುಷ್ಟಗಿಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಉದ್ಘಾಟಿಸಿದರು.

ಕೊಪ್ಪಳ: ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ-2024ಯಲ್ಲಿ ಯುವ ಮತದಾರರು ಹಾಗೂ ವಿಶೇಷಚೇತನರ ಮತದಾನದ ಪ್ರಮಾಣ ಹೆಚ್ಚಿಸಲು ಈ ಬಾರಿ ವಿಶೇಷವಾಗಿ ಕುಷ್ಟಗಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಹೇಳಿದರು.

ಯುವ ಮತದಾರರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಗುರುವಾರ ಕುಷ್ಟಗಿಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರಿಂದ ಶೇಕಡಾವಾರು ಹೆಚ್ಚಿನ ಮತದಾನವಾಗಿತ್ತು. ಅದರಂತೆ ಈ ಬಾರಿಯೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮನೆ ಮನೆ ಭೇಟಿ, ಮ್ಯಾರಾಥಾನ್, ಪಂಜಿನ ಮೆರವಣಿಗೆ, ಆರೋಗ್ಯ ಶಿಬಿರ, ಮೇಣದ ಬತ್ತಿ ಹಚ್ಚುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ವಿಶೇಷವಾಗಿ ಯುವ ಮತದಾರರು ವಿಶೇಷಚೇತನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸಕ್ಷಮ್ ಆ್ಯಪ್ ಮೂಲಕ ವಾಹನದ ವ್ಯವಸ್ಥೆ ಒದಗಿಸಲಾಗುತ್ತಿದೆ. ಮತದಾನ ಕುರಿತು ಜಾಗೃತಿ ಮೂಡಿಸಲು ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಹಾನಗಲ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನಿಂಗಪ್ಪ ಎಸ್. ಮಸಳಿ, ತಹಸೀಲ್ದಾರ್‌ ರವಿ, ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ವಿ.ಎಚ್. ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಫ್ಲೆಯಿಂಗ್ ಸ್ಕ್ವಾಡ್‌, ಬಿಎಲ್‌ಒ, ಪಿಡಿಒ, ಗ್ರಾಪಂ ಸಿಬ್ಬಂದಿ, ಯುವ ಮತದಾರರು ಸಾರ್ವಜನಿಕರು ಹಾಜರಿದ್ದರು.