ಬೇಸಿಗೆ ಮಳೆ : ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ..?

| Published : Apr 26 2024, 12:55 AM IST / Updated: Apr 26 2024, 11:29 AM IST

expat died in kuwait due to lightning strike
ಬೇಸಿಗೆ ಮಳೆ : ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ..?
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರುಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜೀವ ಹಾನಿ ತಗ್ಗಿಸುವ ಮಾರ್ಗಸೂಚಿ ಪ್ರಕಟಿಸಿ ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಚಿಕ್ಕಮಗಳೂರು :  ಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜೀವ ಹಾನಿ ತಗ್ಗಿಸುವ ಮಾರ್ಗಸೂಚಿ ಪ್ರಕಟಿಸಿ ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಪೂರ್ವ ಮುಂಗಾರು ಸಮಯದಲ್ಲಿ ಗುಡುಗು ಸಿಡಿಲಿನ ಅಬ್ಬರ ಹೆಚ್ಚಿರುವ ಮುನ್ಸೂಚನೆಯಿದೆ. ಆದ್ದರಿಂದ ಸಾರ್ವಜನಿಕರು ಏನೆಲ್ಲ ಎಚ್ಚರಿಕೆ ವಹಿಸಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ವೇಳೆ ಅನಿವಾರ್ಯ ವಿದ್ದಲ್ಲಿ ಮಾತ್ರ ಹೊರಗೆ ಹೋಗಬೇಕು ಎಂದು ಸೂಚಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರು, ಜಾನುವಾರು ಮೇಯಿಸುವವರು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸುವವರು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಒಳ್ಳೆಯದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತ ಕಟ್ಟಡಗಳಾದ ಮನೆ, ಕಚೇರಿ, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು.

ಕೆರೆ ಮತ್ತು ನದಿಗಳು ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.ಗುಡುಗು ಸಿಡಿಲಿನ ಮುನ್ಸೂಚನೆ ಇದ್ದಲಿ ಪ್ರಯಾಣ ಮುಂದೂಡಿ ಮನೆಯಲ್ಲೇ ಇರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು ಹಾಗೂ ವಾಹನದ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು, ಮರಗಳು ಮತ್ತು ವಿದ್ಯುತ್ ಲೈಟ್‌ಗಳಿಂದ ದೂರದಲ್ಲಿ ವಾಹನ ನಿಲುಗಡೆ ಮಾಡುವುದು.

ಸಿಡಿಲು ಸಂದರ್ಭದಲ್ಲಿ ಮೊಬೈಲ್ ಪೋನ್‌ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿ ಯನ್ನು ಬಳಸಬಾರದು, ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು ಎಂದು ತಿಳಿಸಿದ್ದಾರೆ.ಮಕ್ಕಳು, ವಯೋವೃದ್ಧರು, ಜಾನುವಾರುಗಳು ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿ ಕೊಳ್ಳಬೇಕು. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರುವುದು.ಸಿಡಿಲು, ಮಿಂಚು ಬಡಿದಾಗ ಪ್ರಾಥಮಿಕವಾಗಿ 112, 108 ಸಹಾಯವಾಣಿಗೆ ಕರೆ ಮಾಡಬೇಕು, ವೈದ್ಯಕೀಯ ಸಿಬ್ಬಂದಿ ಆಗಮಿಸುವ ಮುನ್ನ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು, ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿ ಜೀವವನ್ನು ಉಳಿಸ ಬಹುದಾಗಿದೆ. 

ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿ ಉಸಿರಾಟ ಹಾಗೂ ಎದೆ ಬಡಿತ ಪರೀಕ್ಷಿಸಬೇಕು, ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತ ತಿಳಿಯಬಹುದು, ವ್ಯಕ್ತಿಯಲ್ಲಿ ಉಸಿರಾಟ ಕಂಡು ಬರದಿದ್ದಲ್ಲಿ, ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆ ಪ್ರಾರಂಭಿಸಬೇಕು. 

ಸಿಡಿಲು ಬಡಿದಿರುವ ವ್ಯಕ್ತಿ ಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯ ಸ್ಥಿತಿ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂ. ಸಂಖ್ಯೆ 08262 - 238950 ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ತಿಳಿಸಿದ್ದಾರೆ.