ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು.
ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲು ಪಕ್ಷವು ನೀಡಿರುವಂತ ಜನಪರ ಕಾರ್ಯಕ್ರಮಗಳಾದ ಐದು ಗ್ಯಾರಂಟಿಗಳು ಪ್ರಮುಖವಾದ ಕಾರಣವಾಗಿವೆ ಎಂದು ರಾಜ್ಯ ಆಹಾರ ಮತ್ತು ನಾಗರೀಕರ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.