ನಟ ದರ್ಶನ್‌ ಬೇರೆ ಜೈಲಿಗೆ ಸ್ಥಳಾಂತರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

Published : Aug 27, 2024, 05:25 AM IST
Siddaramaiah

ಸಾರಾಂಶ

ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ :  ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಏಳು ಸಿಬ್ಬಂದಿ ಅಮಾನತು ಮಾಡಲಾಗಿದೆ. ಉನ್ನತಾಧಿಕಾರಿಗಳ ಪಾತ್ರ ಕಂಡುಬಂದರೆ ಅ‍ವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಹ್ಲಾದ ಜೋಶಿಗೆ ನೈತಿಕತೆ ಇಲ್ಲ:

ನಾವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನಾವು ಬಡವರ ಪರವಾಗಿದ್ದೇವೆ ಎಂಬುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ. ಜೋಶಿ ಅವರು ಯಾರ ಪರವಾಗಿದ್ದಾರೆ? ಅವರೇನಾದರೂ ಬಡವರ ಪರವಾಗಿ ಕೆಲಸ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಮಾಡುವ ಕುರಿತು ಶಾಸಕರ ಜೊತೆಗೆ ಮಾತುಕತೆ ಮಾಡಲಾಗುವುದು ಎಂದು ಹೇಳಿದರು.

ನನ್ನ ಅಧಿಕಾರಿದಿಂದ ಕೆಳಗಿಳಿಸಲು ಬಿಜೆಪಿ ಷಡ್ಯಂತ್ರ: ಸಿಎಂ

ಗೋಕಾಕ: ಈ ಬಿಜೆಪಿಯರು ದೇಶದ್ರೋಹಿಗಳು. ಬಿಜೆಪಿಯವರೂ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈಜೋಡಿಸಿದ್ದರು. ಈಗಲೂ ಅದೇ ಕೆಲಸ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅಧಿಕಾರದಿಂದ ಇಳಿಸಲು ಷಡ್ಯಂತ್ರ ನಡೆಸಿದ್ದಾರೆ. ಯಾರು ಏನೇ ಷಡ್ಯಂತ್ರ ನಡೆಸಿದರೂ ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಎಲ್ಲ ಕಾಲದಲ್ಲೂ ದೇಶದ್ರೋಹಿಗಳು ಇದ್ದಾರೆ. ಬ್ರಿಟೀಷರ ಕಾಲದಲ್ಲೂ ದೇಶದ್ರೋಹಿಗಳು ಇದ್ದರು. ಈಗಲೂ ಇದ್ದಾರೆ. ಈ ದೇಶದ್ರೋಹಿಗಳು ನನ್ನನ್ನು ಅಧಿಕಾರದಿಂದ ಅಲ್ಲಾಡಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿಯವರನ್ನು ದೇಶದ್ರೋಹಿಗಳು ಎಂದು ನೇರವಾಗಿ ಆರೋಪಿಸಿದರು.

ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಈ ನಾಡಿನ ಸ್ವಾತಂತ್ರ್ಯಕ್ಕೋಸ್ಕರ ಬ್ರಿಟಿಷರ ವಿರುದ್ಧ ಹೋರಾಡಿದರು. ರಾಣಿ ಚನ್ನಮ್ಮ ಸೆರೆಯಾದ ಬಳಿಕ ಸಂಗೊಳ್ಳಿ ರಾಯಣ್ಣ ಸಣ್ಣ ಸೇನೆ ಕಟ್ಟಿಕೊಂಡು ಗೆರಿಲ್ಲಾ ಮಾದರಿಯ ಯುದ್ಧ ಮಾಡಿ ಬ್ರಿಟಿಷರಿಗೆ ನಡುಕ ಹುಟ್ಟಿಸಿದ್ದರು. ಆದರೆ, ನಮ್ಮವರೇ ಕೆಲವರು ಬ್ರಿಟಿಷರೊಂದಿಗೆ ಕೈಜೋಡಿಸಿ ಅವರನ್ನು ಹಿಡಿದುಕೊಟ್ಟರು ಎಂದರು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌