ಕನ್ನಡಪ್ರಭ ವಾರ್ತೆ, ತುಮಕೂರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿ ಆಟೋ ಚಾಲಕ ಶಾಂತಿನಗರ ಗೂಡ್‌ಶೆಡ್ ಕಾಲೋನಿ ನಿವಾಸಿ ಶಫಿ ಎಂಬಾತನನ್ನು ಕ್ಯಾತ್ಸಂದ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯ ಸಮೀಪ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆರೋಪಿ ತನ್ನ ಆಟೋಗೆ ಹತ್ತಿಸಿಕೊಂಡಿದ್ದಾನೆ. ಬಳಿಕ ಶಾಂತಿನಗರ ಗೂಡ್‌ಶೆಡ್ ಕಾಲೋನಿಯಿಂದ ರಿಂಗ್ ರಸ್ತೆ ಕಡೆಗೆ ಕರೆದೊಯ್ದಿದ್ದಾನೆ. ಬಾಲಕಿಯನ್ನು ಆಟೋದಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಆತನನ್ನು ಹಿಂಬಾಲಿಸಿದ್ದಾರೆ. ಆಟೋ ನಿರ್ಜನ ಪ್ರದೇಶದಲ್ಲಿ ನಿಲ್ಲುತ್ತಿದ್ದಂತೆ ಸಾರ್ವಜನಿಕರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಬಾಲಕಿಯು ಅಪಾಯದಿಂದ ಪಾರಾಗಿದ್ದು, ಆರೋಪಿಯನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.