ಕನ್ನಡಪ್ರಭ ವಾರ್ತೆ ನಾಗಮಂಗಲ
ಗುಜರಾತ್ ಮೂಲದ ಬೆಂಗಳೂರು ವಾಸಿ ಸುಧಾ ಜೈನ್ (58) ಎಂಬುವರೇ ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಘಟನೆಯಲ್ಲಿ ಗಾಯಗೊಂಡಿರುವ ನಾಲ್ಕು ಮಂದಿ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳಿದ್ದ ಸುಧಾ ಜೈನ್ ಕುಟುಂಬಸ್ಥರು ಹೆದ್ದಾರಿಯಲ್ಲಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಲ್ಲಿ ಅಡ್ಡಾದಿಡ್ಡಿಯಿಂದ ಅತಿವೇಗವಾಗಿ ಬರುತ್ತಿದ್ದ ಟಯೋಟಾ ಇಲೆಕ್ಸ್ ಕಾರು ಚಾಲಕ ಮುಂದೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರನ್ನು ಹಿಂದಿಕ್ಕುವ ಭರದಲ್ಲಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಸುಧಾ ಜೈನ್ ಸ್ಥಳದಲ್ಲೇ ಕೊನೆಯುಸಿರೆಳೆದರೆ, ರಸ್ತೆ ಬದಿ ಕೆಲಸ ಮಾಡುತ್ತಿದ್ದ ತಾವರೆಕೆರೆ ಗ್ರಾಮದ ಪೆಟ್ರೋಲ್ ಬಂಕ್ ಮಾಲೀಕನಿಗೆ ಕಾಲು ಮುರಿತವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಡಿಕ್ಕಿ ಹೊಡೆದ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳೂರು ಠಾಣೆಯ ಪೊಲೀಸರು ಎರಡೂ ಕಾರುಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮವಹಿಸಿದ್ದಾರೆ.