ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 7.30ರಿಂದ 9.30ರ ವರೆಗೆ ಶಾಲಾ ವಾಹನಗಳ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. 2,059 ಶಾಲಾ ವಾಹನಗಳ ತಪಾಸಣೆ ಮಾಡಿದ್ದು, ಈ ವೇಳೆ ಪಾನಮತ್ತರಾಗಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಂತೆಯೇ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುತ್ತಿದ್ದ 331 ಶಾಲಾ ವಾಹನಗಳ ಚಾಲಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.