ಮಾಂಸ - ಮೊಟ್ಟೆ ಚೆನ್ನಾಗಿ ಬೇಯಿಸಿ ಸೇವಿಸಿ : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸಲಹೆ

KannadaprabhaNewsNetwork | Updated : Mar 04 2025, 04:33 AM IST

ಸಾರಾಂಶ

ಹಕ್ಕಿ ಜ್ವರ ಸಂಬಂಧಿಸಿ ಬೆಂಗಳೂರು ನಗರ ಜಿಲ್ಲಾಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಕರೆ ನೀಡಿದ್ದಾರೆ.

 ಬೆಂಗಳೂರು : ಹಕ್ಕಿ ಜ್ವರ ಸಂಬಂಧಿಸಿ ಬೆಂಗಳೂರು ನಗರ ಜಿಲ್ಲಾಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಕರೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕರಪತ್ರ ಬಿಡುಗಡೆಗೊಳಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಪಕ್ಷಿಗಳು ಅಥವಾ ಕೋಳಿಗಳ ಅನುಮಾನಾಸ್ಪದ, ಅಸಹಜ ಅಥವಾ ಹಠಾತ್ ಸಾವು ಗಮನಿಸಿದರೆ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಬೇಕು. ಗ್ರಾ.ಪಂ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ವ್ಯಾಧಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು. ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫಾರಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಗಾ ವಹಿಸಬೇಕು. ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಆರೋಗ್ಯದ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸಬೇಕು. ಅಗತ್ಯ ಎನಿಸಿದಲ್ಲಿ ಚಿಕಿತ್ಸೆಗೆ ಯಾವುದೇ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಪಶು ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿ:

ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಈ ಕಾಯಿಲೆ ಮನುಷ್ಯರಿಗೆ ಬರುವುದಿಲ್ಲ. ಆದರೆ, ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಗಳ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು. ಕೋಳಿ ಮಾಂಸವನ್ನು ಸಿದ್ಧಪಡಿಸಿದ ನಂತರ ಕೈಗಳನ್ನು ನಂಜುನಾಶಕದಿಂದ ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ್. ಎಂ. ಮೇಟಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶರತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಯಿಲೆ ಹೇಗೆ ಹರಡುತ್ತದೆ?

ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೈವಿಕ ಸಂಸ್ಥೆಯ ವಿಜ್ಞಾನಿ ಡಾ.ರವೀಂದ್ರ ಹೆಗಡೆ ಮಾತನಾಡಿ, ಹಕ್ಕಿ ಜ್ವರವು ವೈರಾಣುಗಳಿಂದ ಉಂಟಾಗಿ, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ ಮುಂಜಾಗೃತ ಕ್ರಮಗಳು

- ಪಶು ಇಲಾಖೆಯ ಅಧಿಕಾರಿಗಳಿಂದ ಕೋಳಿ ಫಾರಂಗಳ ಪರಿಶೀಲನೆ.

- ನಗರ ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಆರಂಭ.

- ಹಕ್ಕಿಜ್ವರ ಕುರಿತು ಸಮಾಲೋಚನೆಗಾಗಿ ಸಹಾಯವಾಣಿ ಆರಂಭಿಸಲು ಕ್ರಮ.

- ಜನರಲ್ಲಿ ಜಾಗೃತಿ ಮೂಡಿಸುವುದು.

- ಕೋಳಿ ಫಾರಂಗಳ ಸಿಬ್ಬಂದಿಗೆ ಜಾಗೃತಿ. ಅಗತ್ಯ ಬಿದ್ದರೆ ಆರೋಗ್ಯ ತಪಾಸಣೆ.

Share this article