ಮಳವಳ್ಳಿ : ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಪಂಡಿತಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ತಾಲೂಕಿನ ಮಂಚನಹಳ್ಳಿ ನಾಗಸ್ವಾಮಿ (45) ಮತ್ತು ದೊಡ್ಡಮಾದಯ್ಯ(65) ಮೃತಪಟ್ಟವರು.
ಮೃತರು ಸ್ವಗ್ರಾಮ ಮಂಚನಹಳ್ಳಿಯಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬೆಂಗಳೂರಿನಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ನಾಗಸ್ವಾಮಿ, ದೊಡ್ಡಮಾದಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ವಿ.ಕೃಷ್ಣಪ್ಪ, ಗ್ರಾಮಾಂತರ ಪಿಎಸ್‌ಐ ಶ್ರವಣ ದಾಸರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.