ಬೆಂಗಳೂರು : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯ ನಿವಾಸಿ ಸಂಜೀವ್ ಕುಮಾರ್ (22) ಮೃತ ಹಿಂಬದಿ ಸವಾರ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸವಾರ ವಿಜಯ್ ಎಂಬುವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಭಾನುವಾರ ತಡರಾತ್ರಿ ಎರಡು ಗಂಟೆಗೆ ಕೃಷ್ಣಾನಂದನಗರ ಜಂಕ್ಷನ್‌ನಲ್ಲಿ ದುರ್ಘಟನೆ ನಡೆದಿದೆ.
ಬಿಹಾರ ಮೂಲದ ಸಂಜೀವ್ ಕುಮಾರ್ ಕೆಲ ವರ್ಷಗಳಿಂದ ಪೀಣ್ಯದ ಪೆಟ್ರೋಲ್ ಬಂಕ್‌ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು. ಪೀಣ್ಯದ ಬಾಡಿಗೆ ಮನೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ರಾಪಿಡೋ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟಿದ್ದರು. ಮಾರ್ಗ ಮಧ್ಯೆ ಕೃಷ್ಣಾನಂದನಗರ ಜಂಕ್ಷನ್‌ನಲ್ಲಿ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಏಕಾಏಕಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿ ಸವಾರ ಸಂಜೀವ್ ಕುಮಾರ್ ದೇಹದ ಮೇಲೆಯೇ ಲಾರಿ ಚಕ್ರ ಹರಿದು ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರ ವಿಜಯ್‌ನನ್ನು ವಾಹನ ಸವಾರರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಲಾರಿ ನಿಲ್ಲಿಸದೆ ಚಾಲಕ ಪರಾರಿ:
ಘಟನೆ ಬಳಿಕ ಲಾರಿ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಅಪಘಾತ ಎಸಗಿದ ಲಾರಿ ಪತ್ತೆಗೆ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.