ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.
ಕೊಪ್ಪಳ : ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.
ಕನಕಗಿರಿ ತಾಲೂಕಿನ ವಿಠ್ಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲ ಎಂದು ಮಗುವಿನ ತಾಯಿ ಡಿ. 4 ರಂದು ಊದುಬತ್ತಿಯಿಂದ ಸುಟ್ಟಿದ್ದಳು. ಬಳಿಕ ಮಗುವಿಗೆ ಚಿಕಿತ್ಸೆ ಕೊಡಿಸಲು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು. ಫೆ.2ರಂದು ನಡೆದ ಶಿಶು ಮರಣ ತಡೆಯುವ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ನಲಿನ್ ಅತುಲ್, ಕೂಡಲೇ ಪಾಲಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಮೇಲೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಮಾಡಿದಾಗ, ಜ್ವರ ಬಂದ ಮಕ್ಕಳಿಗೆ ಪೋಷಕರು ಊದುಬತ್ತಿಯಿಂದ ಸುಟ್ಟಿರುವುದು ಗೊತ್ತಾಗಿದೆ. ಹೀಗಾಗಿ, ಈ ಕುರಿತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಈ ಮಕ್ಕಳ ಬಗ್ಗೆ ನಿಗಾವಹಿಸಿ ಮತ್ತು ಪ್ರಕರಣವನ್ನು ದಾಖಲಿಸುವಂತೆ ಸೂಚಿಸಿದ್ದಾರೆ.
ಊದುಬತ್ತಿಯಿಂದ ಮಕ್ಕಳಿಗೆ ಸುಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯಇಲಾಖೆಯಿಂದ 18 ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇಂಥ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಬೇಕು.
ಮಹಾಂತೇಶ ಪೂಜಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೊಪ್ಪಳ