ರೇಣುಕಾಸ್ವಾಮಿ ಕೊಲೆ ಕೇಸ್‌: ಪವಿತ್ರಾ ಚಪ್ಪಲೀಲಿ ಹೊಡೆದಿದ್ದಾಳೆ, ಕೊಲೆ ಮಾಡಿಲ್ಲ: ವಕೀಲ

Published : Sep 28, 2024, 11:25 AM IST
pavithra gowda

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.

ಬೆಂಗಳೂರು :  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ಪವಿತ್ರಾಗೌಡ, ದರ್ಶನ್‌, ಪವನ್‌, ಲಕ್ಷ್ಮಣ್‌, ನಾಗರಾಜ್‌, ರವಿ ಶಂಕರ್‌ ಮತ್ತು ವಿನಯ್‌ ಸಲ್ಲಿಸಿದ್ದ ಜಾಮೀನು ಅರ್ಜಿಗಳು ಶುಕ್ರವಾರ ನಗರದ 57ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದವು.

ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ತಿಳಿಸಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಿದರು.

ಇದರಿಂದ ದರ್ಶನ್ ಪರ ವಕೀಲರು, ಸರ್ಕಾರಿ ಅಭಿಯೋಜಕರ ಆಕ್ಷೇಪಣೆಗಳನ್ನು ಪರಿಶೀಲಿಸಿ ವಾದ ಮಂಡಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿ ಒಪ್ಪಿದ ನ್ಯಾಯಾಲಯವು ಅರ್ಜಿಗಳ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿತು.

ಪವಿತ್ರಾಗೆ ಜಾಮೀನು ನೀಡಿ:

ಈ ನಡುವೆ ಪ್ರಕರಣದ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್‌ ವಾದ ಮಂಡಿಸಿ, ರೇಣುಕಾಸ್ವಾಮಿ ಹತ್ಯೆಯಲ್ಲಿ ಪವಿತ್ರಾ ಗೌಡ ಪಾತ್ರವಿಲ್ಲ. ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಪ್ರಕರಣದ ಇತರೆ ಆರೋಪಿಗಳು ರೇಣುಕಾಸ್ವಾಮಿಯನ್ನು ನಗರಕ್ಕೆ ಕರೆದುಕೊಂಡು ಬಂದಿದ್ದರು. ದರ್ಶನ್ ಅವರೊಂದಿಗೆ ಪವಿತ್ರಾ ಪಟ್ಟಣಗೆರೆ ಶೆಡ್‌ಗೆ ಹೋಗಿರುವ ಬಗ್ಗೆ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆಯೇ ಹೊರತು ಹತ್ಯೆ ಮಾಡಿದ್ದಾರೆ ಎಂದು ಹೇಳಿಲ್ಲ. ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷ ಸಾಕ್ಷಿಗಳು, ರೇಣುಕಾಸ್ವಾಮಿಗೆ ಪವಿತ್ರಾ ಚಪ್ಪಲಿಯಿಂದ ಕಪಾಳಕ್ಕೆ ಹೊಡೆದರು ಎಂದು ಹೇಳಿಕೆ ನೀಡಿದ್ದಾರೆ. ಹೊಡೆದ ಮಾತ್ರಕ್ಕೆ ಕೊಲೆ ಮಾಡಿದಂತೆ ಆಗುವುದಿಲ್ಲ. ಆದ್ದರಿಂದ ಆಕೆಗೆ ಜಾಮೀನು ನೀಡುವಂತೆ ಕೋರಿದರು.

ಪ್ರದೂಷ್‌ ಸ್ಥಳಾಂತರದ ಕಾರಣ ತಿಳಿಸಿ:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿ ಜೈಲಿಗೆ ಸ್ಥಳಾಂತರಿಸಿದ ಕ್ರಮ ಪ್ರಶ್ನಿಸಿ 14ನೇ ಆರೋಪಿ ಪ್ರದೂಷ್ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಇದಕ್ಕೂ ಪ್ರತಿಕ್ರಿಯಿಸಿದ ನ್ಯಾ.ಎಂ.ನಾಗಪ್ರಸನ್ನ, ಪರಪ್ಪನ ಅಗ್ರಹಾರ ಜೈಲಿನ ಒಳಾವರಣದಲ್ಲಿನ ದರ್ಶನ್‌ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿಗೆ ಪ್ರದೂಷ್‌ನನ್ನು (ಅರ್ಜಿದಾರ) ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ವಿಡಿಯೋದಲ್ಲಿ ದರ್ಶನ್ ಜೊತೆಗಿದ್ದವರನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಬಹುದಿತ್ತು. ಪ್ರಕರಣದ ಎಲ್ಲ ವಿಚಾರಣಾಧೀನ ಕೈದಿಗಳನ್ನು ಏಕೆ ಸ್ಥಳಾಂತರ ಮಾಡಲಾಯಿತು ಎಂದು ಸರ್ಕಾರಿ ಅಭಿಯೋಜಕರನ್ನು ಪ್ರಶ್ನಿಸಿತು.

ಸರ್ಕಾರಿ ಅಭಿಯೋಜಕರು ಉತ್ತರಿಸಿ, ಅರ್ಜಿದಾರರನ್ನು ಸ್ಥಳಾಂತರಿಸಲು ಪೊಲೀಸ್ ಆಯುಕ್ತರು ಕಾರಣಗಳನ್ನು ನೀಡಿದ್ದಾರೆ. ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಲಾಗುವುದು ಎಂದು ತಿಳಿಸಿದರು.

ಅದಕ್ಕೆ ನ್ಯಾಯಪೀಠ, ವೈರಲ್ ವಿಡಿಯೋ ಹೊರತುಪಡಿಸಿ ಬೇರೆ ಯಾವ ಕಾರಣಕ್ಕೆ ಆರೋಪಿಗಳನ್ನು ಬೇರೊಂದು ಜೈಲಿಗೆ ಸಾಮೂಹಿಕವಾಗಿ ಸ್ಥಳಾಂತರಗೊಳಿಸಲಾಗಿದೆ ಎಂಬುದನ್ನು ತಿಳಿಸಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿತು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ತಡೆಗೋಡೆಗೆ ಕಾರು ಡಿಕ್ಕಿ: ನವ ವಿವಾಹಿತೆ ಸಾವು
ಬೈರತಿಗೆ ಮಧ್ಯಂತರ ಬೇಲಿಲ್ಲ, ಸಿಐಡಿ ಶೋಧ