ಕ್ಷುಲ್ಲಕ ಕಾರಣಕ್ಕೆ ಜಾತ್ರೆಯಲ್ಲಿ ಕಲ್ಲು ತೂರಾಟ, ಮೂವರಿಗೆ ಗಂಭೀರ ಗಾಯ

KannadaprabhaNewsNetwork |  
Published : Nov 13, 2026, 01:15 AM IST
51, 52 | Kannada Prabha

ಸಾರಾಂಶ

ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ಬುಧವಾರ ನಡೆದ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ, ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ದೊಡ್ಡ ಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ಬುಧವಾರ ನಡೆದ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ, ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಮಗುವಿಗೂ ಗಾಯವಾಗಿದೆ. ಜಾತ್ರೆಯ ಅಂಗವಾಗಿ ಬೆಟ್ಟದ ಮೇಲಿನಿಂದ ಶ್ರೀ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಭಕ್ತರು ದೇವರಿಗೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಆಯಾ ಬೀದಿಗಳ ಸ್ಥಳಗಳಲ್ಲಿ ಪಟಾಕಿ ಸಿಡಿಸಲು ಮೊದಲೆ ನಿಗದಿಯಾಗಿತ್ತು, ಅದರಂತೆ ಪಟಾಕಿ ಸಿಡಿಸುವಾಗ ಕಿಡಿಗೇಡಿಯೊಬ್ಬ ಪಟಾಕಿಯನ್ನು ಮತ್ತೊಂದು ಕಡೆಗೆ ಎಳೆದಾಗ

ಪಟಾಕಿಯೊಂದು ಸಿಡಿದು ಅದರ ಕಿಡಿ ಪೂಜೆ ಸಲ್ಲಿಸುತ್ತಿದ್ದ ಭಕ್ತರ ಮೇಲೆ ಹಾರಿದ ಹಿನ್ನೆಲೆ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ಇದು ಎರಡು ಗುಂಪುಗಳ ನಡುವಿನ ಘರ್ಷಣೆಗೆ ತಿರುಗಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಕಾರ್ಯ ಗ್ರಾಮದ ಆನಂದ್, ಭರತ್, ಅಭಿ ಸೇರಿದಂತೆ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮುಖಂಡರ ನಿರ್ಲಕ್ಷ್ಯವೇ ಕಾರಣ:

ಪ್ರತಿವರ್ಷ ಜಾತ್ರೆಯ ಸಂದರ್ಭದಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತಿದ್ದರೂ ಅವುಗಳನ್ನು ಸ್ಥಳದಲ್ಲಿಯೇ ಮಾತುಕತೆಯ ಮೂಲಕ ಬಗೆಹರಿಸಲಾಗುತ್ತಿತ್ತು. ಆದರೆ ಈ ಬಾರಿ ಒಂದು ಸಮುದಾಯದ ಮುಖಂಡರು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸದಿರುವುದೇ ಘರ್ಷಣೆ ತೀವ್ರಗೊಳ್ಳಲು ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘರ್ಷಣೆಯಿಂದಾಗಿ ಬೆಟ್ಟದ ಮೇಲಿನಿಂದ ಆಗಮಿಸಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಅರ್ಧಕ್ಕೆ ಸ್ಥಗಿತಗೊಂಡಿದೆ.

ರಾತ್ರಿ ಸುಮಾರು 7ಕ್ಕೆ ವೇಳೆಗೆ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಲಾಟೆಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಕೆಲಕಾಲ ಮೌನ ಪ್ರತಿಭಟನೆ ನಡೆಸಿದರು.

ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನಂಜನಗೂಡು ತಹಸೀಲ್ದಾರ್ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದ್ದು, ಪರಿಸ್ಥಿತಿಯ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಕುರಿಗಾಹಿಗಳ ಮೇಲೆ ಶೂಟೌಟ್: ಮೂವರು ಆರೋಪಿಗಳ ಬಂಧನ
ಹಾಕಿ ಟೀಂ ಮಾಜಿ ಕ್ಯಾಪ್ಟನ್‌ ಮನೆಗೆ ಕನ್ನ ಹಾಕಿ ಒಲಿಂಪಿಕ್‌ ಪದಕ ಕದ್ದ ಇಬ್ಬರ ಸೆರೆ