ಕನ್ನಡಪ್ರಭ ವಾರ್ತೆ ನವದೆಹಲಿ /ಬೆಂಗಳೂರು
8 ಮಂದಿಯಲ್ಲಿ 6 ಜನರನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿರುವ ಎನ್‌ಐಎ, ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಆರೋಪ ಹೊರಿಸಿದೆ.
ಈ ಪ್ರಕರಣದ ಪ್ರಮುಖ ಸೂತ್ರಧಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೇರಳ ಮೂಲದ ನಸೀರ್ ಆಗಿದ್ದು, ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದೆ.ಇವರಲ್ಲದೇ ಕಳೆದ ಜುಲೈ 19ರಂದು ಬೆಂಗಳೂರಲ್ಲಿ ಬಂಧಿತರಾಗಿದ್ದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಸ್ಫೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಅನುಮಾನದ ಮೇಲೆ ಜು.18ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.19ರಂದು ದಾಳಿ ನಡೆಸಿದ ಪೊಲೀಸರು ಐವರು ಲಷ್ಕರ್ ಉಗ್ರರನ್ನು ಬಂಧಿಸಿದ್ದರು. ಈ ವೇಳೆ ಇವರಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡುಗಳು, ವಾಕಿವಾಟಿಗಳು, ಡ್ಯಾಗರ್‌ಗಳು ಮತ್ತು 12 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣ ರಾಷ್ಟ್ರೀಯ ಭದ್ರತೆ ಸಂಬಂಧಿಸಿದ ಕಾರಣದಿಂದ 2023ರ ಅಕ್ಟೋಬರ್‌ನಲ್ಲಿ ಎನ್‌ಐಎ ಈ ಪ್ರಕರಣವನ್ನು ತನಿಖೆಗೆ ವಹಿಸಿಕೊಂಡಿತ್ತು.
ಇವರು ಯುವಕರ ಬ್ರೈನ್‌ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರ್ಪಡೆ ಮಾಡುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂದು ಪತ್ತೆ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರೆಸಿದೆ ಎಂದು ಎನ್‌ಐಎ ವಕ್ತಾರರು ಹೇಳಿದ್ದಾರೆ.