ಕನ್ನಡಪ್ರಭ ವಾರ್ತೆ ಬೆಂಗಳೂರು
ಸೋಲದೇವನಹಳ್ಳಿಯ ಹರೀಂದ್ರ, ಮುನಿಪ್ರಸಾದ್ ಅಲಿಯಾಸ್ ಮುನಿ ಹಾಗೂ ಸಂಜಯ್ ಅಲಿಯಾಸ್ ಬ್ಲಾಕಿ ಬಂಧಿತರು. ಇತ್ತೀಚೆಗೆ ಹೆಸರಘಟ್ಟ ಮುಖ್ಯರಸ್ತೆಯ ಎಜಿಬಿ ಲೇಔಟ್‌ನಲ್ಲಿ ವ್ಯಕ್ತಿಯೊಬ್ಬರು ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಸುಳಿವು ಸಿಕ್ಕಿದೆ. ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಹೆಸರಘಟ್ಟ ಮುಖ್ಯರಸ್ತೆಯ ಸಪ್ತಗಿರಿ ಜಂಕ್ಷನ್ ಬಳಿ ಎರಡು ದ್ವಿಚಕ್ರ ವಾಹನ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮಾಡಿದಾಗ ದ್ವಿಚಕ್ರ ವಾಹನ ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.ಹೆಚ್ಚಿನ ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಎಂಎಸ್‌ಪಿ ಲೇಔಟ್‌ನ ಆಚಾರ್ಯ ಕಾಲೇಜ್ ಬಳಿಯ ಖಾಲಿ ಜಾಗದಲ್ಲಿ 7 ದ್ವಿಚಕ್ರ ವಾಹನಗಳು ಹಾಗೂ ಚಿಕ್ಕಬಾಣಾವಾರ ರೈಲು ನಿಲ್ದಾಣ ರಸ್ತೆ ಬಳಿ 3 ದ್ವಿಚಕ್ರ ವಾಹನ ಸೇರಿದಂತೆ ಆರೋಪಿಗಳಿಂದ ಪಟ್ಟು 12 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಆರೋಪಿಗಳ ಬಂಧನದಿಂದ ಸೋಲದೇವನಹಳ್ಳಿ, ಮಾದಕನಾಯಕನಹಳ್ಳಿ, ಮಹಾಲಕ್ಷ್ಮಿ ಲೇಔಟ್, ನೆಲಮಂಗಲ ಟೌನ್ ಠಾಣೆಯಲ್ಲಿ ತಲಾ 1 ಹಾಗೂ ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಎರಡು ಸೇರಿದಂತೆ ಒಟ್ಟು 6 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಉಳಿದ ಆರು ದ್ವಿಚಕ್ರ ವಾಹನಗಳ ವಾರಸುದಾರರ ಪತ್ತೆಗೆ ತನಿಖೆ ಮುಂದುವರೆದಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.