ಶಾಲೆ ಬಳಿ ನಿಯಮ ಪಾಲಿಸದ ಸವಾರರ ವಿರುದ್ಧ 510+ ಕೇಸ್‌

KannadaprabhaNewsNetwork | Updated : Jan 22 2024, 04:01 PM IST

ಸಾರಾಂಶ

ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳ ಬಳಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಶಾಲಾ-ಕಾಲೇಜುಗಳ ಬಳಿ ಅಪ್ರಾಪ್ತ ಮಕ್ಕಳು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದಾರೆ. ಇಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಷಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಏಕಮುಖ ಸಂಚಾರ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ 154 ಪ್ರಕರಣಗಳು, ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಾಲನೆಯ 328 ಪ್ರಕರಣಗಳು, ತ್ರಿಬಲ್‌ ರೈಡಿಂಗ್‌ 17 ಪ್ರಕರಣಗಳು, ಪಾದಾಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಾಲನೆಯ 11 ಪ್ರಕರಣಗಳು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘಿಸಿದ ಸವಾರರ ವಿರುದ್ಧ 510ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. 

ಈ ಪೈಕಿ 10 ವಾಹನ ಸವಾರರು ಅಪ್ರಾಪ್ತರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪೋಷಕರು ಮತ್ತು ವಾಹನಗಳ ಮಾಲೀಕರ ವಿರುದ್ಧ ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಕ್ಕಳ ಪೋಷಕರು ಹಾಗೂ ಮಕ್ಕಳಿಗೆ ಎಚ್ಚರಿಕೆ ನೀಡಿ ಸಂಚಾರ ನಿಯಮ ಪಾಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜುಗಳ ಬಳಿ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ನಗರ ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

Share this article