ಬೆಂಗಳೂರು : ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಂ.ಎಸ್.ಪಾಳ್ಯದ ನಾಸೀರ್ (24) ಬಂಧಿತ. ಆರೋಪಿಯಿಂದ ₹3.50 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರು ಪುಟ್ಟೇನಹಳ್ಳಿ ಗಾರ್ಮೆಂಟ್ಸ್‌ವೊಂದರ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ವೇಳೆ ಭಾತ್ಮೀದಾರರ ಖಚಿತ ಮಾಹಿತಿ ಮೇರೆಗೆ ವೀರಸಾಗರದ ಮುಖ್ಯರಸ್ತೆಯಲ್ಲಿ ಆರೋಪಿ ನಾಸೀರ್‌ನನ್ನು ದ್ವಿಚಕ್ರ ವಾಹನ ಸಹಿತ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಾನೇ ದ್ವಿಚಕ್ರ ವಾಹನ ಕಳವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಹಿಂದೆಯೂ ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈತ ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಮುಖ್ಯರಸ್ತೆಯ ರೈಲ್ವೆ ವ್ಹೀಲ್ ಆ್ಯಂಡ್ ಆಕ್ಸೆಲ್ ಫ್ಯಾಕ್ಟರಿ ಪಕ್ಕದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದ ಆರು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಕದ್ದ ಬೈಕ್‌ನಲ್ಲಿ ವ್ಹೀಲಿಂಗ್:
ಆರೋಪಿ ನಾಸೀರ್ ಆಟೋ ಚಾಲನೆ ಹಾಗೂ ಮೆಕ್ಯಾನಿಕ್ ಕೆಲಸ ಮಾಡುತ್ತಾನೆ. ವ್ಹೀಲಿಂಗ್ ಚಟಕ್ಕೆ ಬಿದ್ದಿರುವ ಈತ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ವ್ಹೀಲಿಂಗ್ ಮಾಡುತ್ತಿದ್ದ. ಬಳಿಕ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿ ಪರಾರಿಯಾಗುತ್ತಿದ್ದ. ಗಿರಾಕಿಗಳು ಸಿಕ್ಕರೆ ಮಾರಾಟ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಈತನ ಬಂಧನದಿಂದ ಯಲಹಂಕ ಉಪನಗರ ಠಾಣೆಯ ಮೂರು, ಚಿಕ್ಕಜಾಲದ ಎರಡು ಸೇರಿ ಒಟ್ಟು ಐದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಉಳಿದ ಎರಡು ದ್ವಿಚಕ್ರ ವಾಹನಗಳ ವಾರಸುದಾರರ ಪತ್ತೆಗೆ ತನಿಖೆ ಮುಂದವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.