ಕನ್ನಡಪ್ರಭ ವಾರ್ತೆ ಗುಬ್ಬಿ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಕೌನ್ಸಿಲಿಂಗ್ ಮತ್ತು ಮಾನಸಿಕ ಆರೋಗ್ಯ ಸಮಿತಿ, ಇನ್ನರ್ ವ್ಹೀಲ್ ಕ್ಲಬ್ ಗುಬ್ಬಿ-319 ಹಾಗೂ ತುಮಕೂರು ಮನೋವಿಜ್ಞಾನ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಮಾನಸಿಕ ಆರೋಗ್ಯ ಜಾಗೃತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನಸಿಕ ಆರೋಗ್ಯದ ಸಮಸ್ಯೆಗಳು ವ್ಯಕ್ತಿಯ ಆಲೋಚನೆ, ಭಾವನೆ, ನಡವಳಿಕೆ ಹಾಗೂ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಮಾನಸಿಕ ಅನಾರೋಗ್ಯಕ್ಕೆ ಸಂಬಂಧಿಸಿದ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸುವುದು ಮುಖ್ಯ. ಅತಿಯಾದ ಆತಂಕ, ಒತ್ತಡ, ನಿರಂತರ ದುಃಖ, ನಿದ್ರೆಯ ಸಮಸ್ಯೆ, ಏಕಾಗ್ರತೆಯ ಕೊರತೆ ಹಾಗೂ ಮನಸ್ಸಿನ ಅಶಾಂತಿಯಂತಹ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷಿಸದೆ ಸೂಕ್ತ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಅವರು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲ ಡಾ. ಓ. ನಾಗರಾಜು ಮಾತನಾಡಿ, ಇಂದಿನ ಯುವಜನತೆಯ ಜೀವನಶೈಲಿ ಹಾಗೂ ಆಲೋಚನೆಗಳಲ್ಲಿ ಹಲವು ಬದಲಾವಣೆಗಳು ಕಂಡುಬರುತ್ತಿವೆ. ಸುಲಭವಾಗಿ ಹಣ ಗಳಿಸುವ ಆಸೆ, ಸ್ಪರ್ಧಾತ್ಮಕ ಮನೋಭಾವ ಹಾಗೂ ಸಾಮಾಜಿಕ ಒತ್ತಡಗಳು ಯುವಜನರ ಮೇಲೆ ಪರಿಣಾಮ ಬೀರುತ್ತಿವೆ. ವಿದ್ಯಾರ್ಥಿಗಳು ತಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರೊಂದಿಗೆ ಉತ್ತಮ ಜೀವನಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಶಿಲ್ಪ ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡಾಗ ಮಾತ್ರ ಆರೋಗ್ಯವಂತ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ. ಮಾನಸಿಕ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಪೋಷಕರು, ಶಿಕ್ಷಕರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಇನ್ನರ್ ವ್ಹೀಲ್ ಕ್ಲಬ್ ಕಾರ್ಯದರ್ಶಿ ಗೀತಾ ಗಂಗಾಧರ್, ಖಜಾಂಚಿ ಮಂಜುಳ, ಸದಸ್ಯೆ ಗಾಯತ್ರಿ, ಕಾರ್ಯಕ್ರಮದ ಸಂಚಾಲಕ ಶ್ರೀಕಾಂತ್, ಡಾ. ಮಮತ ಸೇರಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇನ್ನರ್ ವ್ಹೀಲ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.