ದೆಹಲಿಯಲ್ಲಿ ರಾಜ್ಯ ಬಿಜೆಪಿಯಭಿನ್ನಪಡೆ ಚಟುವಟಿಕೆ ಬಿರುಸು

KannadaprabhaNewsNetwork |  
Published : Feb 05, 2025, 12:30 AM IST
ವಿಜಯೇಂದ್ರ | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದ ಮುಖಂಡರು ಮಂಗಳವಾರ ದೆಹಲಿಯಲ್ಲಿ ಬಿರುಸಿನ ಚಟುವಟಿಕೆ ನಡೆಸಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಇತರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದ ಮುಖಂಡರು ಮಂಗಳವಾರ ದೆಹಲಿಯಲ್ಲಿ ಬಿರುಸಿನ ಚಟುವಟಿಕೆ ನಡೆಸಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಇತರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ಪಕ್ಷದ ರಾಷ್ಟ್ರೀಯ ಘಟಕದ ಪ್ರಭಾವಿ ನಾಯಕರೂ ಆಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿ ಮಾಡಲು ಪ್ರಯತ್ನ ನಡೆಸುತ್ತಿದ್ದು, ಸಾಧ್ಯವಾಗದಿದ್ದರೆ ಬೆಂಗಳೂರಿಗೆ ವಾಪಸ್ ಬಂದು ಮತ್ತೊಮ್ಮೆ ದೆಹಲಿ ಯಾತ್ರೆ ಕೈಗೊಳ್ಳುವ ಬಗ್ಗೆಯೂ ಯತ್ನಾಳ್‌ ಬಣದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಯತ್ನಾಳ್‌ ಬಣದ ಮುಖಂಡರಾದ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ ಪಾಟೀಲ್, ಎನ್.ಆರ್.ಸಂತೋಷ್ ಅವರು ರಾಜ್ಯದವರೇ ಆಗಿರುವ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರನ್ನು ಕಂಡು ರಾಜ್ಯ ಘಟಕದಲ್ಲಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಿದರು. ಜತೆಗೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಬಾರದು, ಅವರ ಬದಲಿಗೆ ಬೇರೊಬ್ಬ ಸಮರ್ಥರನ್ನು ನೇಮಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದೇ ವೇಳೆ ಯತ್ನಾಳ್‌ ಮತ್ತಿತರ ಕೆಲ ಮುಖಂಡರು ಮಂಗಳವಾರ ರಾತ್ರಿ ದೆಹಲಿಗೆ ತಲುಪಿದರು. ಬುಧವಾರ ಪಕ್ಷದ ರಾಷ್ಟ್ರೀಯ ಘಟಕದ ಪ್ರಭಾವಿ ನಾಯಕರೂ ಆಗಿರುವ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಲು ಯತ್ನಾಳ್‌ ಬಣದ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಅಮಿತ್ ಶಾ ಅವರು ಇನ್ನೂ ಈ ಭೇಟಿಗೆ ಹಸಿರು ನಿಶಾನೆ ತೋರಿಲ್ಲ.ಅದಕ್ಕೂ ಮೊದಲು ಎಂಬಂತೆ ಮಂಗಳವಾರ ಯತ್ನಾಳ್‌ ಬಣದ ಮುಖಂಡರು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರನ್ನು ಒಬ್ಬೊಬ್ಬರಾಗಿ ಭೇಟಿ ಮಾಡಿ ವಿಜಯೇಂದ್ರ ವಿರುದ್ಧ ಅಭಿಪ್ರಾಯ ರೂಪಿಸುವ ಪ್ರಯತ್ನ ನಡೆಸಿದರು. ಹೆಚ್ಚಿನ ಸಂಸದರು ವಿಜಯೇಂದ್ರ ಅವರನ್ನು ಮುಂದುವರೆಸುವ ಬಗ್ಗೆ ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ನಿರ್ಧರಿತವಾಗಬಹುದು ಎನ್ನಲಾಗುತ್ತಿದೆ.

ವಿಜಯೇಂದ್ರ ಅವರನ್ನು ಬದಲಿಸುವ ಏಕೈಕ ಉದ್ದೇಶ ಹೊಂದಿರುವ ಈ ಯತ್ನಾಳ್ ಬಣದ ಮುಖಂಡರು ಪಕ್ಷದ ರಾಷ್ಟ್ರೀಯ ಘಟಕದ ಮೇಲೆ ಪ್ರಭಾವ ಬೀರುವಂಥ ಇತರ ನಾಯಕರನ್ನೂ ಭೇಟಿ ಮಾಡಿ ಮನವರಿಕೆ ಮಾಡಿಕೊಡುವುದರಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!