ಅಭ್ಯರ್ಥಿಗಳ ಒತ್ತಡ: ಬಿಜೆಪಿಗೆ ತಲೆನೋವು

KannadaprabhaNewsNetwork |  
Published : May 28, 2024, 01:07 AM ISTUpdated : May 28, 2024, 05:04 AM IST
ಬಿಜೆಪಿ | Kannada Prabha

ಸಾರಾಂಶ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಆಕಾಂಕ್ಷಿಗಳ ಒತ್ತಡ ತೀವ್ರವಾಗಿದ್ದು, ರಾಜ್ಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

 ಬೆಂಗಳೂರು :  ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಆಕಾಂಕ್ಷಿಗಳ ಒತ್ತಡ ತೀವ್ರವಾಗಿದ್ದು, ರಾಜ್ಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಬಗ್ಗೆ ರಾಜ್ಯ ನಾಯಕರು ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು, ನೀವು ಶಿಫಾರಸು ಪಟ್ಟಿಯನ್ನು ಕಳುಹಿಸಿದ್ದೀರಿ. ಮುಂದಿನದನ್ನು ನಾವು ನೋಡಿಕೊಳ್ಳುತ್ತೇವೆ ಎಂಬ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ಮೂರು ಸ್ಥಾನಗಳು ಲಭ್ಯವಾಗುತ್ತವೆ. 

ಕಳೆದ ವಾರ ನಡೆದ ಬಿಜೆಪಿ ರಾಜ್ಯ ಘಟಕದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಸುಮಾರು 44ಕ್ಕೂ ಹೆಚ್ಚು ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆದಿತ್ತು. ಅಂತಿಮವಾಗಿ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿ.ವಿ.ರಾಜೇಶ್ ಅವರಿಗೆ ನೀಡಲಾಗಿತ್ತು.

ಆ ಪ್ರಕಾರ ಉಭಯ ನಾಯಕರು ಮೂರು ಸ್ಥಾನಗಳಿಗೆ ಸುಮಾರು 15ಕ್ಕೂ ಹೆಚ್ಚು ಹೆಸರುಗಳನ್ನು ಅಂತಿಮಗೊಳಿಸಿ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದರು. ಆದರೆ, ಪಟ್ಟಿ ಕಳುಹಿಸಿದ ಬಳಿಕವೂ ರಾಜ್ಯ ನಾಯಕರಿಗೆ ಆಕಾಂಕ್ಷಿಗಳ ಒತ್ತಡ ಕಡಮೆಯಾಗಿಲ್ಲ. ಮತ್ತಷ್ಟು ಹೆಚ್ಚಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರು, ಟಿಕೆಟ್ ತಪ್ಪಿಸಿಕೊಂಡವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದವರು ಹೀಗೆ ಅನೇಕರು ರಾಜ್ಯ ನಾಯಕರಿಗೆ ಪರಿಷತ್‌ ಚುನಾವಣೆಗೆ ಅವಕಾಶ ಕಲ್ಪಿಸುವಂತೆ ದುಂಬಾಲು ಬಿದ್ದಿದ್ದಾರೆ. 

ಈ ಬಗ್ಗೆ ರಾಜ್ಯ ನಾಯಕರು ವರಿಷ್ಠರನ್ನು ಸಂಪರ್ಕಿಸಿ ತಮ್ಮ ಅಳಲು ಹೇಳಿಕೊಂಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ ವರಿಷ್ಠರು, ನೀವು ನಿಮ್ಮ ಕೆಲಸ ಮಾಡಿದ್ದೀರಿ. ಮೂರು ಕ್ಷೇತ್ರಗಳಿಗೆ ಹೆಸರುಗಳನ್ನು ಶಿಫಾರಸು ಮಾಡಿದ್ದೀರಿ. ಮುಂದಿನದನ್ನು ನಾವು ನೋಡಿಕೊಳ್ಳುತ್ತೇವೆ. ನೀವು ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಎಂಬ ಮಾತನ್ನು ಹೇಳಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೇಂದ್ರ ಸಚಿವ ಚೌಹಾಣ್‌ ಐಎಸ್‌ಐ ಟಾರ್ಗೆಟ್‌: ಭದ್ರತೆ ಹೆಚ್ಚಳ
ಆನಂದದ ಕ್ಷಣ ದುರಂತದ ಕ್ಷಣವಾಗಿ ಬದಲು!