;Resize=(412,232))
ನವದೆಹಲಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಕಬ್ಬು ಬೆಳೆಗಾರರ ಕುಂದುಕೊರತೆಗಳನ್ನು ಪರಿಹರಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ ನಿಯೋಗದ ಜೊತೆಗಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರಕ್ಕೆ ಬರಲಾಯಿತು. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಸಂಬಂಧ ದೆಹಲಿಯಲ್ಲಿ ಸೋಮವಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಕಬ್ಬು ಬೆಳೆಗಾರರ ನಿಯೋಗದೊಂದಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಆಹಾರ ಸಚಿವ ಪ್ರಹ್ಲಾದ್ ಜೋಶಿಯವರು ಮಾತುಕತೆ ನಡೆಸಿದರು. ರೈತ ಸಂಘಟನೆಗಳ ಸುಮಾರು 80-90 ರೈತರು ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಮೂರು ಗಂಟೆ ಮಾತುಕತೆ ನಡೆಯಿತು.
ಸಭೆ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕಬ್ಬು ಬೆಳೆಗಾರರ ಕುಂದುಕೊರತೆಗಳನ್ನು ಪರಿಹರಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೇಂದ್ರ, ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಪ್ರತಿನಿಧಿಗಳು, ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು, ವಿಷಯ ತಜ್ಞರು ಮತ್ತು ವಿಜ್ಞಾನಿಗಳು ಈ ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿಯು ಕಬ್ಬು ಕೊಯ್ಲಿನ ಸಮಯ, ರೈತರಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಖಾತರಿ, ಆಧುನಿಕ ಪ್ರಯೋಗಾಲಯ ಪರೀಕ್ಷಾ ವ್ಯವಸ್ಥೆ ಸ್ಥಾಪನೆ, ನಿಖರ ತೂಕ ಮಾಪನ ಖಾತರಿಯಂತಹ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ನಿಗದಿತ ಸಮಯದೊಳಗೆ ಸರ್ಕಾರಕ್ಕೆ ತನ್ನ ಶಿಫಾರಸ್ಸುಗಳನ್ನು ಸಲ್ಲಿಸಲಿದೆ ಎಂದು ತಿಳಿಸಿದರು.
ಬೆಂಬಲ ಬೆಲೆ ಹೆಚ್ಚಳ ಸೇರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರು ನಡೆಸಿದ ಪ್ರತಿಭಟನೆ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರೈತ ಪ್ರತಿನಿಧಿಗಳನ್ನು ದೆಹಲಿಗೆ ಮುಕ್ತ ಚರ್ಚೆಗಾಗಿ ಆಹ್ವಾನಿಸಿದ್ದರು. ಅದರಂತೆ ಈ ಸಭೆ ನಡೆಯಿತು.
ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ನೀಡಿ ದೆಹಲಿಗೆ ಕರೆಸಿಕೊಂಡ ಕೇಂದ್ರ ಸರ್ಕಾರ, ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ರೈತರನ್ನು ವಾಪಸ್ ಕಳುಹಿಸುವ ಮೂಲಕ ಅವಮಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.