ಕೊಲ್ಕತಾ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಇಂಡಿಯಾ ಕೂಟದ ಪುನರುಜ್ಜೀವನಕ್ಕೆ ಬೇಡಿಕೆ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ, ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. 2026ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಅವರು ಘೋಷಿಸಿದ್ದಾರೆ.
ಆದರೆ ರಾಜ್ಯದಲ್ಲಿ ಹಿಂದಿನಂತೆ ಕಾಂಗ್ರೆಸ್ ಮತ್ತು ಎಡಪಕ್ಷಗಳ ಕುರಿತ ತಮ್ಮ ಕಠಿಣ ನಿಲುವು ಮುಂದುವರೆಸಿರುವ ಮಮತಾ, 2026ರಲ್ಲೂ ನಾವು ಏಕಾಂಗಿಯಾಗಿ ಕಣಕ್ಕೆ ಇಳಿದು ಹೋರಾಡಲಿದ್ದೇವೆ. ಮೂರನೇ ಎರಡು ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದು ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಘೋಷಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪಾಲು ಇಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಬಾಗಿಲು ಹಾಕಿದ್ದಾರೆ.
2021ರ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 294 ಸ್ಥಾನಗಳ ಪೈಕಿ ಟಿಎಂಸಿ 215, ಬಿಜೆಪಿ 77, ಕಾಂಗ್ರೆಸ್ 0, ಎಡಪಕ್ಷಗಳು ಶೂನ್ಯ ಸಂಪಾದನೆ ಮಾಡಿದ್ದವು.