ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆ ನಡೆಸದ್ದಕ್ಕೆ ಕೋರ್ಟ್‌ ಚಾಟಿ

KannadaprabhaNewsNetwork |  
Published : Aug 13, 2024, 12:46 AM ISTUpdated : Aug 13, 2024, 08:29 AM IST
ಹೈಕೋರ್ಟ್‌ | Kannada Prabha

ಸಾರಾಂಶ

ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, 

 ಬೆಂಗಳೂರು :  ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ವಿಧಿಗೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಹೈಕೋರ್ಟ್‌ಗೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ಕ್ರಮ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಮೂರು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್, ಕಾನೂನಿನ ಪ್ರಕಾರ ಜಿ.ಪಂ. ಹಾಗೂ ತಾ.ಪಂ. ಅವಧಿ ಮುಗಿದ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಆದರೆ ಅವಧಿ ಮುಗಿದು ನಾಲ್ಕು ವರ್ಷ ಕಳೆದಿದ್ದರೂ ಚುನಾವಣೆ ನಡೆಸಿಲ್ಲ. ಅವುಗಳು ಸದ್ಯ ರಾಜ್ಯ ಸರ್ಕಾರದ ಆಡಳಿತಾಧಿಕಾರಿಗಳ ಅಧೀನದಲ್ಲಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಅಚ್ಚರಿಗೊಂಡ ಮುಖ್ಯ ನ್ಯಾಯಮೂರ್ತಿಗಳು, ಅಂದರೆ ನಾಲ್ಕು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲವೇ ಎಂದು ಪ್ರಶ್ನಿಸಿ, ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ಪರಿಚ್ಛೇದಕ್ಕೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕ ವಿನಾಯಿತಿ ಪಡೆದಿದೆಯೇ ಎಂದು ಸರ್ಕಾರಿ ವಕೀಲರನ್ನು ಕಟುವಾಗಿ ಪ್ರಶ್ನಿಸಿದರು.

ರಾಜ್ಯ ಹೆಚ್ಚುವರಿ ಅಡ್ವೋಕೇಟ್‌ ಜನರಲ್ ಪ್ರತಿಮಾ ಹೊನ್ನಾಪುರ, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ಚುನಾವಣೆ ವಿಳಂಬವಾಗಿದೆ. ರಾಜ್ಯದ ಎಲ್ಲಾ 31 ಜಿ.ಪಂ.ಗಳ ಕ್ಷೇತ್ರ ಪುನರ್‌ ವಿಂಗಡಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಮೀಸಲು ನಿಗದಿಪಡಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ಬೇಕಿದೆ ಎಂದರು.

ಈ ಮಧ್ಯೆ ನ್ಯಾಯಪೀಠ, ಕ್ಷೇತ್ರ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಕಾರ್ಯ ಚುನಾವಣಾ ಆಯೋಗದ್ದಲ್ಲವೇ ಎಂದು ಕೇಳಿತು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಉತ್ತರಿಸಿ, ಈ ಮೊದಲು ಆ ಅಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮುಗಿಸಿತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಪುನರ್‌ ವಿಂಗಡಣೆ ಹಾಗೂ ಮೀಸಲು ನಿಗದಿ ಅಧಿಕಾರವನ್ನು ಆಯೋಗದಿಂದ ಹಿಂಪಡೆದಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಇನ್ನು 12 ವಾರಗಳಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವೇ ಈ ಹಿಂದೆ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ವರ್ಷ ಉರುಳಿದ್ದರೂ ಸರ್ಕಾರ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಅದಕ್ಕಾಗಿಯೇ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!