ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿ ಕಾರಣ

KannadaprabhaNewsNetwork | Published : Apr 8, 2025 12:34 AM

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದ್ದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಜನರನ್ನು ಎತ್ತಿ ಕಟ್ಟಿ ಜನಾಕ್ರೋಶ ಎಂಬ ಪದವನ್ನು ಬಳಕೆ ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ತೆರಿಗೆ ನೀತಿಯೇ ಕಾರಣ. ಆದರೆ ಜನರು ಏರಿಕೆಯ ಬೆಲೆಯಿಂದ ತತ್ತರಿಸುತ್ತಿದ್ದಾರೆ ಎಂದು ಜನಾಕ್ರೋಶ ಎಂಬ ಕಾರ್ಯಕ್ರಮದ ಅಡಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಕೇವಲ ಬಿಜೆಪಿಯ ಆಕ್ರೋಶ ಅಷ್ಟೇ ಹೊರತು ಜನಾಕ್ರೋಶ ಅಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ನಗರ ಹೊರವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದ್ದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಜನರನ್ನು ಎತ್ತಿ ಕಟ್ಟಿ ಜನಾಕ್ರೋಶ ಎಂಬ ಪದವನ್ನು ಬಳಕೆ ಮಾಡುತ್ತಿದೆ ಎಂದು ತಿರುಗೇಟು ನೀಡಿದರು,

ವಿನಯ್‌ ಆತ್ಮಹತ್ಯೆ ಪ್ರಕರಣ

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಂಗಳೂರಿನಲ್ಲಿ. ಆದರೆ ಶಾಸಕರು ಇದ್ದಿದ್ದು ವಿರಾಜಪೇಟೆಯಲ್ಲಿ. ಅದಕ್ಕೂ ಇದಕ್ಕೂ ಎಲ್ಲಿ ಸಂಬಂಧ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಶಾಸಕರಿಗೂ ಇವರ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ. ಆದರೂ ಈ ವಿಚಾರದಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದ್ದು ತನಿಖೆ ನಡೆಸುತ್ತಿದೆ. ತನಿಖೆ ನಂತರ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ ಎಂದರು.

ಕೇಂದ್ರ ಸಚಿವ ಕುಮಾರಸ್ವಾಮಿಯವರ ಮೇಲೆ ಸೇಡನ್ನು ತೀರಿಸಿಕೊಳ್ಳುವ ರೀತಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ ನಾವು ಕೇಂದ್ರ ಸಚಿವರು ಆಗಿರತಕ್ಕಂತ ಕುಮಾರಸ್ವಾಮಿಯವರ ಮೇಲೆ ಯಾವುದೇ ರೀತಿಯಲ್ಲಿ ಧ್ವೇಷದ ರಾಜಕಾರಣಕ್ಕೆ ಮುಂದಾಗಿಲ್ಲ. ಅವರು ದೇಶಕ್ಕೆ ಮಂತ್ರಿಯಾಗಿದ್ದಾರೆ ಅವರನ್ನು ನಾವು ಹೇಗೆ ದ್ವೇಷಿಸಲು ಸಾಧ್ಯ, ಇದೆಲ್ಲಾ ಸುಳ್ಳು ಆಪಾದನೆಗಳು ಎಂದು ತಳ್ಳಿ ಹಾಕಿದರು,

ಕಾನೂನು ಸುವ್ಯವಸ್ಥೆ ಉತ್ತಮ

ರಾಜ್ಯದಲ್ಲಿ ಈಗ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಆಳ್ವಿಕೆಯಲ್ಲಿನ ಕಾನೂನು ಸುವ್ಯವಸ್ಥೆ ಗಿಂತ ಸಿದ್ದರಾಮಯ್ಯನ ಆಳ್ವಿಕೆಯ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಉತ್ತಮಪಡಿಸಿದೆ ಅದರಲ್ಲಿ ಎರಡು ಮಾತಿಲ್ಲ ಎಂದು ತಿಳಿಸಿದರು.

ಎಸ್‌ಐ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ರಸ್ತುತ 402 ಸಬ್ ಇನ್ಸ್ ಪೆಕ್ಟರ್ ಗಳ ನೇಮಕ‌ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಆಂಧ್ರದ ಗಡಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಮೂಲಕ ಗಾಂಜಾ ಸೇರಿದಂತೆ ಯಾವುದೇ ಮಾದಕ ವಸ್ತುಗಳು ರಾಜ್ಯ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೋಕ್ಸೋ ಪ್ರಕರಣಗಳನ್ನು ತಡೆಯಲು ಸೂಕ್ತ ಕ್ರಮ ಜರುಗಿಸಬೇಕು. ದಾಖಲಾಗಿರುವ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ಶಿಕ್ಷೆಯಾಗುತ್ತಿರುವ ಪ್ರಮಾಣ ಕಡಿಮೆ ಇದೆ ಎಂದರು. ಹೆದ್ದಾರಿಗಳಲ್ಲಿ 19 ಬ್ಲ್ಯಾಕ್ ಸ್ಪಾಟ್

ಜಿಲ್ಲೆಯಲ್ಲಿ ಹಾದು ಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ 19 ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ನಿರ್ದೇಶನ‌ ನೀಡಲಾಗಿದೆ ಎಂದರು.

ಈ ವೇಳೆ ಕೇಂದ್ರ ವಲಯದ ಐಜಿಪಿ ಲಾಬು ರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಇದ್ದರು.

Share this article