ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ

KannadaprabhaNewsNetwork | Published : Feb 11, 2024 1:49 AM

ಸಾರಾಂಶ

ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಕಿಶೋರ್ ಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧಿಸಿ, ಫೋಕ್ಸೋ ಪ್ರಕರಣ ದಾಖಲಿಸುವುದು ಹಾಗೂ ಶಾಲೆಯಿಂದ ಹೊರಗೂಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಮಕ್ಕಳ ರಕ್ಷಣೆ ಮಾಡಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಪೋಕ್ಸೋ ಕಾಯ್ದೆ-೨೦೧೨ ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬, ಆರ್.ಟಿ.ಇ ಕಾಯ್ದೆ-೨೦೦೯ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲೂಕು ಮತ್ತು ಗ್ರಾಮಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಎಲ್ಲ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಫೋಕ್ಸೋ ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮ ವಹಿಸಬೇಕು. ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಮಾಜದ ಅನಿಷ್ಟ ಪದ್ಧತಿಗಳನ್ನು ತಡೆಯಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್.ಕುಂದರ್ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ಕಾರ್ಯನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ, ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದು ಉತ್ತಮ ರೀತಿಯಲ್ಲಿ ಮಕ್ಕಳ ರಕ್ಷಣೆಯಲ್ಲಿ ಭಾಗಿಯಾಗಿ ಅವರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಣ್ಣ ಗೌಡ ಹಟ್ಟಿ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ್ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮುಂತಾದವರು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಸ್ವಾಗತಿಸಿದರು. ಗುರುರಾಜ್ ನಿರೂಪಿಸಿದರು. ಮೌನೇಶ್ ಪೋತದಾರ ವಂದಿಸಿದರು.

Share this article