ವೈದ್ಯ ಅತ್ಯಾಚಾರ : ಇಂದು ಮೌನ ಪ್ರತಿಭಟನೆಗೆ ರೈತ ಸಂಘ ಬೆಂಬಲ

KannadaprabhaNewsNetwork | Published : Aug 24, 2024 1:23 AM

ಸಾರಾಂಶ

ಚಿಕ್ಕಮಗಳೂರು, ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ಆ. 24 ರಂದು ಇನ್ನರ್ ವ್ಹೀಲ್‌ ಕ್ಲಬ್‌ ನೇತೃತ್ವದಲ್ಲಿ ನಗರದಲ್ಲಿ ನಡೆಯುವ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಸಂಘಟನೆ ಬೆಂಬಲಿಸಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ಆ. 24 ರಂದು ಇನ್ನರ್ ವ್ಹೀಲ್‌ ಕ್ಲಬ್‌ ನೇತೃತ್ವದಲ್ಲಿ ನಗರದಲ್ಲಿ ನಡೆಯುವ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗ್ರೀನ್ ಆರ್ಮಿ ಇಂಡಿಯಾ ಸಂಘಟನೆ ಬೆಂಬಲಿಸಿದೆ.

ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ. ದಯಾಕರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಹನುಮಂತಪ್ಪ ವೃತ್ತದಿಂದ ಎಂಜಿ ರಸ್ತೆ ಮಾರ್ಗವಾಗಿ ಆಜಾದ್ ಪಾರ್ಕ್ ವರೆಗೆ ಮೌನ ಮೆರವಣಿಗೆ ಹಾಗೂ ಬಹಿರಂಗ ಸಭೆ ನಡೆಯಲಿದ್ದು, ಎಲ್ಲಾ ರೈತರು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು, ನಾಗರಿಕರು ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ದೇಶಾದಲ್ಲಿ ಅಮಾಯಕ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೊಲ್ಕತ್ತಾದಲ್ಲಿ ಅತ್ಯಾಚಾರ, ಕೊಲೆಗೀಡಾದ ವೈದ್ಯಕೀಯ ತರಬೇತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ವಿಶ್ರಾಂತಿಗೆ ತೆರಳಿದ್ದಾಗ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿದ್ದಾಳೆ. ಕರ್ನಾಟಕದಲ್ಲೂ ಹೆಣ್ಣು ಭ್ರೂಣ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಅಸಹಾಯಕ ಯುವತಿಯರು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚಾಗುತ್ತಿವೆ ಎಂದರು.

ಈ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸ್ಥಳೀಯ ಜಿಲ್ಲಾಡಳಿತಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಇಂತಹ ಕೃತ್ಯಗಳು ಮರುಕಳಿಸದಂತೆ ಕಾನೂನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಅಪರಾಧಗಳಿಗೆ ಕಾರಣವಾದ ಗಾಂಜಾ, ಅಫೀಮು ಇನ್ನಿತರೆ ಮಾದಕ ವಸ್ತುಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕಬೇಕು. ಇದಕ್ಕಾಗಿ ರಾಜ್ಯ, ಕೇಂದ್ರ ಸರ್ಕಾರ ಸಮಗ್ರ ಯೋಜನೆಯೊಂದನ್ನು ತಯಾರಿಸಿ, ವಿಶೇಷ ಕಾರ್ಯಪಡೆ ನಿಯೋಜಿಸಿ ಸ್ತ್ರೀಯರು, ಮಕ್ಕಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ಸಿ.ಟಿ. ತುಳಸೇಗೌಡ, ರಮೇಶ್‌, ಎಸ್. ಮನು ಇದ್ದರು.

Share this article