ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ್ ತಿಳಿಸಿದರು.
ಹಾಸನ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆಯನ್ನು ನೀಡಿ ರಾಜ್ಯಪಾಲರು ನೀಡಿರುವ ಪಾರದರ್ಶಕ ತನಿಖೆಗೆ ಸಹಕಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ್ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಶ್ಲಾಘನೀಯ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು. ಆದರೆ ರಾಜ್ಯಪಾಲರ ಆದೇಶವನ್ನು ಕಾಂಗ್ರೆಸ್ ನಾಯಕರು ಬೀದಿ ಬೀದಿಗಳಲ್ಲಿ ಮಾತನಾಡಿ, ಅವರ ಆದೇಶವನ್ನು ವಿರೋಧಿಸುವ ಮೂಲಕ ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ ಅವರ ವಿರುದ್ಧ ತನಿಖೆಯನ್ನು ಸ್ವಾಗತಿಸಿದ ಕಾಂಗ್ರೆಸ್ ಇಂದು ಸಿದ್ದರಾಮಯ್ಯ ಅವರ ಮೇಲೆ ಆರೋಪ ಬಂದಾಗ ರಾಜ್ಯಪಾಲರನ್ನು ವಿರೋಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮುಡಾ ಹಗರಣದಲ್ಲಿ ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತವಾಗಿ ಅವರು ನ್ಯಾಯಾಲಯದಲ್ಲಿ ಬಂದು ತಮ್ಮ ಮೇಲಿನ ಆರೋಪಕ್ಕೆ ಉತ್ತರ ನೀಡಬೇಕು. ಅದನ್ನು ಬಿಟ್ಟು ತಮ್ಮ ಪ್ರಭಾವ ಬಳಸಿ ತನಿಖೆ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಕೂಡ ಇದೇ ರೀತಿಯ ಅವ್ಯವಹಾರ ನಡೆದ ಪರಿಣಾಮ ತನಿಖೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ತನ್ನ ಪ್ರಭಾವ ಬಳಸಿ ಬಸವರಾಜ್ ದದ್ದಲ್ ಹಾಗೂ ಮಾಜಿ ಶಾಸಕ ನಾಗೇಂದ್ರ ಹೆಸರು ಕೈಬಿಟ್ಟಿರುವುದು ಸರ್ಕಾರದ ಕೈವಾಡ ಇರುವುದನ್ನು ಸ್ಪಷ್ಟಪಡಿಸುತ್ತಿದೆ. ಇದು ಮರುಕಳಿಸದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.
ಈ ಹಿಂದೆ ಕೂಡ ಅಧಿವೇಶನ ನಡೆಯುವ ಹಿಂದಿನ ದಿನ ತನಿಖಾ ತಂಡ ರಚಿಸಿ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ದೂರಿದರು. ರಾಜ್ಯ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷರಾದ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿ, ಆಲೂರು - ಸಕಲೇಶಪುರ - ಕಟ್ಟಾಯ ವಿಧಾನಸಭಾ ಕ್ಷೇತ್ರವನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಗೆ ಬಳಸಿಕೊಂಡಿದೆ. ಕೇವಲ ಎರಡು ಮೂರು, ಆರು ತಿಂಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅವರನ್ನು ಒಂದೆಡೆ ಕೆಲಸ ಮಾಡಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ. ಈ ರೀತಿಯಾದರೆ ಕ್ಷೇತ್ರದಲ್ಲಿ ಕೆಲಸ ಮಾಡಿಸುವುದು ಹೇಗೆ ಎಂದು ಪ್ರಶ್ನಿಸಿದರು.
ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ತಮ್ಮ ಪ್ರಭಾವ ಬಳಸಿ ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿ ಕಿರುಕುಳ ನೀಡುವ ಜೊತೆಗೆ ಅವರಿಗೆ ಧಮ್ಕಿ ಹಾಕುವ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಮಾತಿನಂತೆ ನಡೆಯದೇ ಇದ್ದರೆ ಅವರನ್ನು ವರ್ಗಾವಣೆ ಮಾಡಿಸುವ ಕೆಲಸವನ್ನು ಕೆಲ ಸ್ಥಳೀಯ ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದು ದೂರಿದರು.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಕೆಲ ಮಂತ್ರಿಗಳು ಸಕಲೇಶಪುರ ಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಲೆನಾಡಿನಲ್ಲಿ ಸುರಿದ ಭಾರಿ ಮಳೆಗೆ ಸಂಪೂರ್ಣ ಹಾಳಾಗಿರುವ ಹಲವು ರಸ್ತೆಗಳನ್ನು ಸಿಎಂ ಅವರಿಗೆ ತೋರಿಸಿ ಬೆಳೆ ಹಾನಿ ಬಗ್ಗೆ ಕೂಡ ಸಿಎಂ ಅವರಿಗೆ ಮನವರಿಕೆ ಮಾಡಿ ಒಂದಷ್ಟು ಹಣ ಬಿಡುಗಡೆ ಮಾಡುವ ಸಲುವಾಗಿ ಮನವಿ ಮಾಡಿದ್ದೇನೆ. ಆದರೆ ಈವರೆಗೆ ಒಂದು ಬಿಡಿಗಾಸು ಬಿಡುಗಡೆ ಮಾಡಿಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮುಖಂಡರಾದ ನವಿಲೆ ಅಣ್ಣಪ್ಪ, ಲಕ್ಷ್ಮಣ್ ಇತರರು ಇದ್ದರು.