ರೈತರಿಗಾಗಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ

KannadaprabhaNewsNetwork |  
Published : Aug 12, 2026, 01:30 AM IST
ಬರದ ಛಾಯೆ: ರೈತರ ನೆರವಿಗೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಿ | Kannada Prabha

ಸಾರಾಂಶ

ಕಣಕಟ್ಟೆ ಹೋಬಳಿಯ ರಾಮನಹಳ್ಳಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವರು, ಸ್ಥಳದಲ್ಲಿದ್ದ ರೈತರೊಂದಿಗೆ ನೇರವಾಗಿ ಚರ್ಚಿಸಿ ಸಮಸ್ಯೆಗಳನ್ನು ಆಲಿಸಿದರು. ರೈತರು ಎದುರಿಸುತ್ತಿರುವ ಸಂಕಷ್ಟ ಹಾಗೂ ಬೆಳೆ ನಷ್ಟದ ಕುರಿತು ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ ಸೇರಿದಂತೆ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಹಲವು ನಿರ್ದೇಶನಗಳನ್ನು ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ, ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಚಿವ ಕೆ.ಎಂ. ಶಿವಲಿಂಗೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೆಳೆ ಹಾನಿಯ ನಿಖರ ಮಾಹಿತಿ ಸಂಗ್ರಹಿಸಿ, ಅರ್ಹ ರೈತರಿಗೆ ಬೆಳೆ ವಿಮೆ ಹಾಗೂ ಸರ್ಕಾರದ ನಿಯಮಾನುಸಾರ ಪರಿಹಾರ ದೊರೆಯುವಂತೆ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ನಿರ್ದೇಶಿಸಿದರು.

ತಾಲೂಕಿನ ಕಣಕಟ್ಟೆ ಹೋಬಳಿಯ ರಾಮನಹಳ್ಳಿಯಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವರು, ಸ್ಥಳದಲ್ಲಿದ್ದ ರೈತರೊಂದಿಗೆ ನೇರವಾಗಿ ಚರ್ಚಿಸಿ ಸಮಸ್ಯೆಗಳನ್ನು ಆಲಿಸಿದರು. ರೈತರು ಎದುರಿಸುತ್ತಿರುವ ಸಂಕಷ್ಟ ಹಾಗೂ ಬೆಳೆ ನಷ್ಟದ ಕುರಿತು ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ ಸೇರಿದಂತೆ ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಹಲವು ನಿರ್ದೇಶನಗಳನ್ನು ನೀಡಿದರು.ರಾಗಿ ಬೆಳೆ ಮೇಲೆ ಬರದ ಹೊಡೆತ:

ತಾಲೂಕಿನಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು, ಮಳೆ ಕೈಕೊಟ್ಟಿರುವ ಪರಿಣಾಮ ಬಿತ್ತನೆಯಾದ ಹಲವು ಪ್ರದೇಶಗಳಲ್ಲಿ ಬೆಳೆ ಒಣಗುವ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನಾದ್ಯಂತ ಕೇವಲ ಶೇ. 4ರಷ್ಟು ಬಿತ್ತನೆಯಾಗಿದ್ದು, ಬಿತ್ತನೆಯಾದ ಪ್ರದೇಶದಲ್ಲಿಯೂ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬೆಳೆಯದಿರುವ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಜಿಲ್ಲೆಯಾದ್ಯಂತ ಒಟ್ಟಾರೆ ಶೇ. 32ರಷ್ಟು ಮಾತ್ರ ಬಿತ್ತನೆಯಾಗಿದ್ದು, ಮಳೆ ಕೊರತೆಯಿಂದ ಬಿತ್ತನೆಯಾದ ಪ್ರದೇಶಗಳಲ್ಲಿಯೂ ಬೆಳೆ ಹಾನಿಯಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 60 ಸಾವಿರ ರೈತರನ್ನು ವಿಮೆ ವ್ಯಾಪ್ತಿಗೆ ತರುವ ಗುರಿ: ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು. ಬಿತ್ತನೆ ವಿಫಲವಾದ ಸಂದರ್ಭದಲ್ಲಿ ವಿಮಾ ಯೋಜನೆಯ ನಿಯಮಾನುಸಾರ ಪರಿಹಾರ ಪಡೆಯಲು ಅವಕಾಶವಿರುವುದರಿಂದ, ಯಾವುದೇ ಅರ್ಹ ರೈತರು ವಿಮೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.ಬೆಳೆ ವಿಮೆ ಮಾಡಿಸಿಕೊಳ್ಳದ ರೈತರನ್ನು ಗುರುತಿಸಿ, ಗ್ರಾಮಗಳಿಗೆ ತೆರಳಿ ಯೋಜನೆಯ ಕುರಿತು ಅರಿವು ಮೂಡಿಸುವುದರೊಂದಿಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ತಾಲೂಕಿನಲ್ಲಿ ಸುಮಾರು 60 ಸಾವಿರ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರುವ ಗುರಿ ಹೊಂದಲಾಗಿದ್ದು, ಈಗಾಗಲೇ 40 ಸಾವಿರ ರೈತರ ನೋಂದಣಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಿಗದಿಪಡಿಸಿರುವ ಗುರಿಯನ್ನು ಶೇ.100ರಷ್ಟು ಸಾಧಿಸಬೇಕು. ನೋಂದಣಿಗೆ ಕೆಲವೇ ದಿನಗಳು ಬಾಕಿಯಿರುವುದರಿಂದ ಅಧಿಕಾರಿಗಳು ವಿಶೇಷ ಗಮನಹರಿಸಿ ಎಲ್ಲ ಅರ್ಹ ರೈತರಿಗೂ ಬೆಳೆ ವಿಮೆ ಮಾಡಿಸಬೇಕು” ಎಂದು ಸೂಚಿಸಿದರು. ಬೆಳೆ ವಿಮೆ ರೈತರಿಗೆ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಆರ್ಥಿಕ ಭದ್ರತೆಯಾಗಿ ನೆರವಾಗಲಿದೆ. ಇದರ ಜೊತೆಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ವಯ ಅರ್ಹ ರೈತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆಬರ ಪರಿಸ್ಥಿತಿ ತೀವ್ರಗೊಂಡಲ್ಲಿ ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಬೆಳೆ ನಷ್ಟದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಬೇಕು ಎಂದು ಶಿವಲಿಂಗೇಗೌಡ ಹೇಳಿದರು. ಜಿಲ್ಲೆಯ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳನ್ನು ಗುರುತಿಸಿ, ಪಂಚಾಯಿತಿವಾರು ನಿಖರವಾದ ವರದಿ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಪ್ರಗತಿ, ಬೋರ್‌ವೆಲ್‌ಗಳ ಸ್ಥಿತಿ, ಅಗತ್ಯವಿರುವ ಕಡೆ ಮರು ಕೊಳವೆಬಾವಿ ಕೊರೆಯುವ ಸಾಧ್ಯತೆ, ನೀರಿನ ಟ್ಯಾಂಕ್‌ಗಳ ಸ್ಥಿತಿ ಸೇರಿದಂತೆ ಪ್ರತಿಯೊಂದು ಅಂಶವನ್ನೂ ಪಿಡಿಒಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದರು. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಿಗೆ ಸರ್ಕಾರದಿಂದ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತುರ್ತು ಕ್ರಮ ಕೈಗೊಳ್ಳಬೇಕು. ಯಾವುದೇ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.ಸ್ಥಳೀಯ ಜೋಳ ಖರೀದಿಗೆ ಒತ್ತು:ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಜೋಳದ ಬೆಳೆಯೂ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಸ್ಥಳೀಯವಾಗಿ ಬೆಳೆಯುವ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಿ ಜಿಲ್ಲೆಯಲ್ಲಿಯೇ ಪಶು ಆಹಾರ ತಯಾರಿಕೆಗೆ ಬಳಸುವ ಕುರಿತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವುದರ ಜೊತೆಗೆ, ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.ಸೋಮವಾರ ಸರ್ಕಾರಕ್ಕೆ ಬರ ಪರಿಸ್ಥಿತಿ ವರದಿ:

ಜಿಲ್ಲೆಯ ಬರ ಪರಿಸ್ಥಿತಿಯ ಸಮಗ್ರ ಚಿತ್ರಣ ಪಡೆಯಲು ಭಾನುವಾರ ವಿಶೇಷ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಚಿವರು ತಿಳಿಸಿದರು.ಪ್ರತಿ ತಾಲೂಕಿನಲ್ಲಿ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ, ಎಷ್ಟು ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ, ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ, ಜಾನುವಾರುಗಳಿಗೆ ಎಷ್ಟು ಪ್ರಮಾಣದ ಮೇವಿನ ಅಗತ್ಯವಿದೆ ಹಾಗೂ ರೈತರಿಗೆ ಉಂಟಾಗಿರುವ ಆರ್ಥಿಕ ನಷ್ಟದ ಪ್ರಮಾಣ ಎಷ್ಟಿದೆ ಎಂಬುದರ ಕುರಿತು ನಿಖರ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

----

* ಹೇಳಿಕೆಜಿಲ್ಲೆಯ ಬರ ಪರಿಸ್ಥಿತಿಯ ಸಮಗ್ರ ವರದಿಯನ್ನು ಸೋಮವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿ, ಬರ ಘೋಷಣೆ ಹಾಗೂ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಕೆ.ಎಂ. ಶಿವಲಿಂಗೇಗೌಡ, ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದುಷ್ಕರ್ಮಿಗಳ ಬಂಧನ, ಸಂತ್ರಸ್ತರಿಗೆ ನ್ಯಾಯಕ್ಕೆ ಹೋರಾಟ
ಬ್ರೀಫ್‌...ದೇವಸ್ಥಾನ ನಿರ್ಮಾಣ ವಿಚಾರಕ್ಕೆ ಕೋಮು ಸಂಘರ್ಷ