140 ಕಿಮೀ ಮಾನವ ಸರಪಳಿಗೆ ಸಿದ್ಧತೆ

KannadaprabhaNewsNetwork |  
Published : Sep 12, 2024, 01:48 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್  | Kannada Prabha

ಸಾರಾಂಶ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿರುವ ಹಿನ್ನಲೆ ಶಾಸಕ ಎನ್.ವೈ ಗೋಪಾಲಕೃಷ್ಣ, ಡಿಸಿ ಟಿ.ವೆಂಕಟೇಶ್, ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿರುವ ಹಿನ್ನಲೆ ಮೊಳಕಾಲ್ಮುರು ಶಾಸಕ ಎನ್.ವೈ. ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾನವ ಸರಪಳಿ ಯಶಸ್ವಿ ಮಾಡುವ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಎರಡು ದಿನಗಳ ಹಿಂದೆ ಸರಣಿ ಸಭೆಗಳನ್ನು ಮಾಡಿದ್ದರು. ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾನವ ಸರಪಳಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಪ್ರಜಾಪ್ರಭುತ್ವ ದಿನಾಚರಣೆಗೆ ಅರ್ಥಪೂರ್ಣ ಚೌಕಟ್ಟು ನೀಡಬೇಕೆಂದು ತಿಳಿಸಿದ್ದರು.

ಸಚಿವರ ಸರಣಿ ಸಭೆಗಳ ಬೆನ್ನ ಹಿಂದೆಯೆ ಶಾಸಕ ಎನ್.ವೈ.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟೇಶ್ ಜಿಲ್ಲೆಯ ಗಡಿವರೆಗೂ ತೆರಳಿ ಪರಿಸ್ಥಿತಿ ಅವಲೋಕಿಸಿದರು. ನಂತರ ಮೊಳಕಾಲ್ಮುರು ತಾಲೂಕು ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕ ಉತ್ತರ ತುದಿಯಾದ ಬೀದರ್‌ನಿಂದ ದಕ್ಷಿಣ ತುದಿ ಚಾಮರಾಜನಗರ ವರೆಗೆ ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗ. ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಪ್ರಜಾಪ್ರಭುತ್ವ ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯವರೆಗೆ ಒಟ್ಟು 140 ಕಿಮೀ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು.

ಮಾನವ ಸರಪಳಿ ಯಶಸ್ವಿಗೆ ಈಗಾಗಲೇ ಸಮಿತಿಗಳ ಮಾಡಲಾಗಿದೆ. ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲಿವೆ. ವಿದ್ಯಾರ್ಥಿಗಳನ್ನು ಕರೆತಂದು ನಂತರ ವಾಪಾಸ್ಸು ಕಳಿಸಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಉಪ ಕಾರ್ಯದರ್ಶಿ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಾಪಂ ಇಒ ಹನುಮಂತಪ್ಪ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ