ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ‘ನಮ್ಮ ನಡಿಗೆ ಪಂಚಾಯತ್‌ ಕಡೆಗೆ’: ರಮೇಶ್‌ ಕಾಂಚನ್‌

KannadaprabhaNewsNetwork |  
Published : Jul 02, 2025, 11:49 PM IST
ದ2ರಮೇಶ್‌ | Kannada Prabha

ಸಾರಾಂಶ

ಬುಧವಾರ ಉಡುಪಿ ತಾಪಂ ಸಭಾಂಗಣದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನೆರವೇರಿತು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಹಾಗೂ ಯೋಜನೆಗಳ ಮಾಹಿತಿಯನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ‘ನಮ್ಮ ನಡಿಗೆ ಪಂಚಾಯತ್ ಕಡೆಗೆ’ ಎಂಬ ಕಾರ್ಯಕ್ರಮ ಆಯೋಜಿಸಲಾಗುವುದು. ಜನಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರಿಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಬುಧವಾರ ಉಡುಪಿ ತಾಪಂ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲಾಗುತ್ತಿದೆ. ತಾಲೂಕು ಮಟ್ಟದಲ್ಲಿಯೂ ಸಹ ಇನ್ನಷ್ಟು ಪರಿಣಾಮಕಾರಿಯಾಗಿ ಬಡ ಜನರಿಗೆ ಯೋಜನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದರು. ಜನಸಾಮಾನ್ಯರು ಯಾವುದೇ ಯೋಜನೆಗಳ ಲಾಭ ಪಡೆಯಲು ಮುಂದೆ ಬಂದಾಗ ಅವರನ್ನು ಸತಾಯಿಸದೇ ಅವರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಲು ಕ್ರಮವಹಿಸಬೇಕು ಎಂದರು.

ಈ ಹಿಂದೆ ಹೆರ್ಗಾ ಭಾಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ನಿಲ್ಲಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಸೋಮವಾರದಿಂದ ಬಸ್ಸುಗಳು ಪುನಃ ಸಂಚಾರ ನಡೆಸುತ್ತಿವೆ. ಬಡಗುಬೆಟ್ಟು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಸಂಚಾರ ನಿಲ್ಲಿಸಿರುವ ಬಸ್ಸುಗಳು ಪುನರ್ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದ ಅವರು, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ನಿಗಮದ ಬಸ್ಸುಗಳ ಮಾಹಿತಿ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿ ಹೊಂದಿರುವ ಪಡಿತರ ಚೀಟಿದಾರರ ತನಿಖೆಯನ್ನು ಹಂತಹಂತವಾಗಿ ನಡೆಸಿ, ಅನರ್ಹ ಪಡಿತರ ಚೀಟಿ ರದ್ದುಪಡಿಸಲು ಕ್ರಮವಹಿಸಬೇಕು. ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದರು.

ಉಡುಪಿ ತಾಲೂಕಿಗೆ ಸಂಬಂಧಿಸಿದಂತೆ ಯುವನಿಧಿ ಯೋಜನೆಯ ಲಾಭ ಪಡೆಯುತ್ತಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯಡಿ ಹೆಚ್ಚು ಹೆಚ್ಚು ನೋಂದಾಯಿಸಲು ಕಾಲೇಜುಗಳಲ್ಲಿ ಮಾಹಿತಿ ನೀಡುವಂತಹ ಕಾರ್ಯಾಗಾರಗಳನ್ನು ಏರ್ಪಡಿಸಬೇಕು ಎಂದ ಅವರು, ಡಿಪ್ಲೋಮಾ ಅಭ್ಯರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದರು.

ಉಡುಪಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಉಡುಪಿ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ವಿಜಯಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ