29ಕ್ಕೆ ರಿಸರ್ವ್‌ ಬ್ಯಾಂಕ್‌ ಎದುರು ರೈತ ಸಂಘ ಪ್ರತಿಭಟನೆ

KannadaprabhaNewsNetwork |  
Published : Jan 26, 2025, 01:33 AM IST
25ಎಚ್ಎಸ್ಎನ್7 : ಚನ್ನರಾಯಪಟ್ಟಣದ ಪತ್ರಕರ್ತರ ಭವನದಲ್ಲಿ ಜಿಲ್ಲಾ ರೈತಸಂಘದ ಕಾರ್ಯಾಧ್ಯಕ್ಷ ಮಾಳೇನಹಳ್ಳಿ ಹರೀಶ್ ಸುದ್ದಿಗೋಷ್ಠಿ ನಡೆಸಿದರು. ಜಿಲ್ಲಾಧ್ಯಕ್ಷ ಎಚ್. ಕೆ. ರಘು ಹಿರೀಸಾವೆ ಇದ್ದರು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜ.೨೯ರಂದು ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ರೈತರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಾಳೇನಹಳ್ಳಿ ಹರೀಶ್ ತಿಳಿಸಿದ್ದಾರೆ. ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರೈತ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕರೆ ನೀಡಿದರು.

ಕನ್ನಡಪ್ರಭ ವಾರ್ತ ಚನ್ನರಾಯಪಟ್ಟಣ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜ.೨೯ರಂದು ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ರೈತರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಾಳೇನಹಳ್ಳಿ ಹರೀಶ್ ತಿಳಿಸಿದ್ದಾರೆ.

ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರೈತ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕರೆ ನೀಡಿದರು.

ಕೃಷಿ ಕ್ಷೇತ್ರವನ್ನು ಸದೃಢಗೊಳಿಸುವ ದೃಷ್ಟಿಯಿಂದ ಆರ್ಥಿಕ ನೆರವು ನೀಡಲು ಸ್ಥಾಪನೆಯಾಗಿರುವ ನಬಾರ್ಡ್ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತವನ್ನು ಕಡಿತಗೊಳಿಸಿದೆ. ದೇಶದ ಮಹನೀಯರು ದೂರದೃಷ್ಟಿಯಿಂದ ಸಹಕಾರಿ ಚಳವಳಿಯನ್ನು ಕಟ್ಟಿ ನಡೆಸಿದ ಸಹಕಾರ ಸಂಸ್ಥೆಗಳು ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದು, ಅದರಲ್ಲೂ ಮುಖ್ಯವಾಗಿ ನಮ್ಮ ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿವೆ. ನಮ್ಮ ಹಾಲಿನ ಡೇರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಡಿ.ಸಿ.ಸಿ. ಬ್ಯಾಂಕುಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿವೆ.

ಕೇಂದ್ರ ಸರ್ಕಾರ ಕಳೆದ ೩ ವರ್ಷದಿಂದಲೂ ಪ್ರತಿವರ್ಷ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಲೇ ಬರುತ್ತಿದೆ. ಕೇಂದ್ರದ ಈ ನೀತಿಯಿಂದಾಗಿ ನಬಾರ್ಡ್‌ ರೈತರಿಗೆ ನೀಡುತ್ತಿದ್ದ, ಸಾಲದ ಮೊತ್ತವನ್ನು ಕಡಿಮೆ ಮಾಡಿ ಈ ಸಾಲಿನಲ್ಲಿ ನಮ್ಮ ರಾಜ್ಯಕ್ಕೆ ನೀಡುತ್ತಿದ್ದ ಸಾಲವನ್ನು ೫೮% ತಗ್ಗಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೊರೇಟ್ ಕಂಪನಿಗಳ ವಶಕ್ಕೆ ವಹಿಸಲು ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಎಚ್. ಕೆ. ರಘು ಹಿರೀಸಾವೆ ಮಾತನಾಡಿ, ನಬಾರ್ಡ್ ಕಳೆದ ವರ್ಷ ನಮ್ಮ ರಾಜ್ಯಕ್ಕೆ ೫೬೦೦ ಕೋಟಿ ರು. ನೀಡಿತ್ತು. ಈ ವರ್ಷ ಕೇವಲ ೨೩೪೦ ಕೋಟಿ ರು.ಗಳನ್ನು ನೀಡಿದೆ. ಇದರಿಂದಾಗಿ ೫ ಲಕ್ಷದವರೆವಿಗೆ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಸ್ಥೆಗಳ ಮೂಲಕ ನೀಡುತ್ತಿದ್ದ, ಅಲ್ಪಾವಧಿ ಸಾಲಕ್ಕೆ ಕುತ್ತು ಬಂದಿದೆ. ಮತ್ತು ರಿಯಾಯಿತಿ ದರದಲ್ಲಿ ೧೫.೦೦ ಲಕ್ಷ ರು.ಗಳವರೆಗೆ ದೊರೆಯುತ್ತಿದ್ದ, ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೂ ಹೊಡೆತ ಬೀಳುತ್ತದೆ. ಶೂನ್ಯ ಬಡ್ಡಿ ದರದಲ್ಲಿ ಸುಮಾರು ೩೦ ಲಕ್ಷ ರೈತರು ಪಡೆಯುತ್ತಿದ್ದ ಸಾಲ ನಿಂತು ಹೋಗುತ್ತದೆ, ರೈತರು ಹೆಚ್ಚು ಬಡ್ಡಿ ತೆತ್ತು, ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಬೇಕು ಇಲ್ಲವೇ ಖಾಸಗಿ ಸಾಲದ ಸುಳಿಗೆ ಸಿಕ್ಕಿ ಹಾಕಿಕೊಳ್ಳಬೇಕು. ಈ ಸುಳಿಗೆ ರೈತ ಸಮುದಾಯ ಬಲಿಯಾದಲ್ಲಿ ಸ್ಥಿರಾಸ್ತಿಗಳು ಹರಾಜಾಗುತ್ತವೆ. ಈಗಾಗಲೇ ಪ್ರತಿ ೩೬ ನಿಮಿಷಕ್ಕೆ ಒಬ್ಬ ರೈತ ಆತ್ಮಹತ್ಯೆಗೆ ಒಳಗಾಗುತ್ತಿದ್ದು, ಸರಣಿ ಆತ್ಮಹತ್ಯೆ ಹಾದಿ ತುಳಿಯಬೇಕಾಗುತ್ತದೆ. ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ, ಇತರೆ ಕೃಷಿ ಪೂರ್ವ ಚಟುವಟಿಕೆಗೆ ನೀಡುತ್ತಿದ್ದ ಸಾಲದ ಸಹಾಯಧನ ಸಂಪೂರ್ಣ ಬಂದ್ ಆಗಲಿದೆ. ನಬಾರ್ಡ್ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿದ್ದ ರಸ್ತೆ, ಇತರೆ ಕಾಮಗಾರಿಗಳಿಗೆ ಅವಕಾಶ ಇಲ್ಲದಂತಾಗುತ್ತದೆ. ನಮ್ಮ ರಾಜ್ಯದಲ್ಲಿರುವ ಹಲವಾರು ಡಿ.ಸಿ.ಸಿ. ಬ್ಯಾಂಕುಗಳು, ಭೂ ಅಭಿವೃದ್ಧಿ ಬ್ಯಾಂಕುಗಳು, ಕೃಷಿ ಪತ್ತಿನ ಸಹಕಾರ ಸಂಘಗಳು, ಭವಿಷ್ಯದಲ್ಲಿ ಸಂಪೂರ್ಣವಾಗಿ ಮುಚ್ಚಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ರಾಮಚಂದ್ರು, ಜಿಲ್ಲಾ ಮಹಿಳಾ ಘಟಕದ ಕಾಮಾಕ್ಷಮ್ಮ, ಜಿಲ್ಲಾ ಮುಖಂಡರಾದ ಕುಮಾರ್, ತಾಲೂಕು ಕಾರ್ಯದರ್ಶಿ ಮಂಜೇಗೌಡ ಮತ್ತಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ