ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಜನಪ್ರಿಯವೆನಿಸಿರುವ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, 500 ಕೋಟಿ ಟಿಕೆಟ್ ಉಚಿತ ವಿತರಣೆ ತಲುಪಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಲ್.ಪಿ. ಪ್ರಕಾಶ್ ಗೌಡ ತಿಳಿಸಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿಯಿಂದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 2023ರ ಜೂನ್ 11ರಂದು ಅನುಷ್ಠಾನಕ್ಕೆ ಬಂದ ಶಕ್ತಿ ಗ್ಯಾರಂಟಿ ಯೋಜನೆಯಡಿ ಕಳೆದ 2 ವರ್ಷ ಒಂದು ತಿಂಗಳ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ. ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸಂಸ್ಥೆಯ 4 ನಿಗಮಗಳ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಇದುವರೆಗೆ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೆಟ್ ಗಳ ಸಂಖ್ಯೆ 500 ಕೋಟಿ ತಲುಪಿದೆ ಎಂದರು. ಶಕ್ತಿ ಯೋಜನೆ ಜಾರಿಗೂ ಮುನ್ನ ಹೋಲಿಸಿದರೆ ಆನಂತರ ಹೆಚ್ಚಿನ ಪ್ರಯಾಣಿಕರು ಸಂಚರಿಸಿದ್ದಾರೆ. ತಾಲೂಕಿನಲ್ಲಿ ಕಳೆದ ಜೂನ್ 11,2023ರಿಂದ ಜೂನ್ 11, 2025 ರವರೆಗೂಶಕ್ತಿ ಯೋಜನೆಯಡಿ ತಾಲೂಕಿನಲ್ಲಿ ಮಹಿಳಾ ಪ್ರಯಾಣಿಕರು ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ಟಿಕೆಟ್‌ಗಳ ಮೌಲ್ಯ ಅಂದಾಜು 6.31ಕೋಟಿ ರುಪಾಯಿಗಳಾಗಿದೆ. ಇಲ್ಲಿಯವರೆಗೆ ಅಂದಾಜು 2 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ ಎಂದರು. ಶಾಸಕ ಸಿ. ಎನ್. ಬಾಲಕೃಷ್ಣ ಮಾತನಾಡಿ, ಶಕ್ತಿ ಯೋಜನೆಯಿಂದ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಹಣದ ನಾನಾ ಕೆಲಸಗಳಿಗೆ ಹೋಗುವ ಮಹಿಳೆಯರಿಗೆ ಉಳಿತಾಯವಾಗಿದೆ. ಮತ್ತೊಂದೆಡೆ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೂ ಇದರಿಂದ ಪ್ರಯೋಜನವಾಗಿದೆ. ರಾಜ್ಯಾದ್ಯಂತ ಸಂಚಾರಕ್ಕೆ ಅವಕಾಶ ಸಿಕ್ಕಿರುವುದರಿಂದ ಧಾರ್ಮಿಕ ಸ್ಥಳಗಳಿಗೆ ಹೋಗುವ ಮಹಿಳೆಯರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ಹೆಚ್ಚಾದರೂ ಪೂರಕವಾಗಿ ಬಸ್‌ಗಳ ಸಂಖ್ಯೆ ಹೆಚ್ಚಾಗದಿರುವುದು ವಿಪರ್ಯಾಸ ಎಂದರು. ವಾರಂತ್ಯಗಳಲ್ಲಿ ಹಾಸನದಿಂದ ಬೆಂಗಳೂರಿಗೆ ಚಲಿಸುವ ಮತ್ತುಬೆಂಗಳೂರಿಂದ ಹಾಸನಕ್ಕೆ ಬರುವ ಎಲ್ಲಾ ಬಸ್ಸುಗಳು ಬಹುತೇಕ ತುಂಬಿರುತ್ತದೆ. ಇದರಿಂದ ವೃದ್ಧರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆಯಾಗುತ್ತಿದೆ. ತಾಲೂಕಿನ 25,000 ಮಂದಿ ಬೆಂಗಳೂರಿನಲ್ಲಿ ನೆಲೆಸಿದ್ದು ವಾರಾಂತ್ಯದಲ್ಲಿ ಬೆಂಗಳೂರಿಂದ ಇಲ್ಲಿಗೆ ಆಗಮಿಸಲು ಮತ್ತು ಇಲ್ಲಿಂದ ಬೆಂಗಳೂರಿಗೆ ತೆರಳಲು ಹೆಚ್ಚಿನ ಸಮಸ್ಯೆ ಆಗುತ್ತಿದ್ದು ಪ್ರಯಾಣಿಕರ ಸಂಖ್ಯೆ ಅನುಗುಣವಾಗಿ ಬಸ್‌ಗಳ ಸಂಖ್ಯೆ ಹೆಚ್ಚು ಮಾಡಿದರೆ ಯೋಜನೆಯ ಪೂರ್ಣ ಪ್ರಮಾಣದ ಸೌಲಭ್ಯ ಎಲ್ಲರಿಗೂ ದೊರೆತಾಗುತ್ತದೆ ಸರ್ಕಾರ ಕೂಡಲೇ ವಾರಾಂತ್ಯದಲ್ಲಿ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದರು. ಸಂಭ್ರಮಾಚರಣೆಯಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿಯ ಸದಸ್ಯರಾದ ನವೀನ್, ನಾಗೇಶ್, ಗಣೇಶ್, ಕೆಂಪೇಗೌಡ, ಕೆ.ಎನ್.ನಾಗೇಶ್, ಮಧು, ಜನಾರ್ಧನ್, ನಿಶ್ಚಲ್, ರಂಗಸ್ವಾಮಿ, ಟಿಎಪಿಸಿಎಂಎಸ್‌ನ ಅಧ್ಯಕ್ಷ ಅನಿಲ್ ಮರಗೂರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚನ್ನರಾಯಪಟ್ಟಣ ಘಟಕದ ವ್ಯವಸ್ಥಾಪಕ ಅಲೀಮುಲ್ಲಾ ಖಾನ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ಸಹಾಯಕ ನಿರ್ದೇಶಕ ಎನ್. ಗಿರೀಶ್, ವಕೀಲ ನವೀನ್ ಕುಮಾರ್ ಸೇರಿದಂತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.