ಕನ್ನಡಪ್ರಭ ವಾರ್ತೆ ಹಾಸನ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಯುವ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುಮಾರು ೧೫೦ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಈಗಾಗಲೇ ೩೦೦೦ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು. ಒಂದೇ ಸೂರಿನಡಿಯಲ್ಲಿ ೧೫೦ಕ್ಕೂ ಹೆಚ್ಚು ಕಂಪನಿಗಳು ಆಗಮಿಸಿರುವುದರಿಂದ ಜಿಲ್ಲೆಯ ಎಲ್ಲಾ ಯುವಕ ಯುವತಿಯರು ಆಗಮಿಸಿ ಸದುಪಯೋಗವನ್ನು ಪಡೆದುಕೊಂಡು ತಮ್ಮ ಜೀವನವನ್ನು ಆರ್ಥಿಕತೆಗೆ ಕೊಂಡೊಯ್ಯಬೇಕು ಎಂದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಜೊತೆಗೆ ಅವರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು. ೨೦೦ಕ್ಕೂ ಹೆಚ್ಚು ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು, ಸುಮಾರು ೧೮೦ ಕಂಪನಿಗಳು ಮೇಳದಲ್ಲಿ ಭಾಗವಹಿಸಿವೆ, ಇಂದಿನ ದಿನಗಳಲ್ಲಿ ಉದ್ಯೋಗ ಹುಡುಕುವುದಕ್ಕಿಂತ ಉದ್ಯೋಗ ಸೃಷ್ಟಿ ಮಾಡುವ ಮನೋಭಾವ ಯುವಕರಲ್ಲಿ ಬೆಳೆಬೇಕು ಎಂದು ಹೇಳಿದರು. ಯುವಕರು ಮೊಬೈಲ್ ಬಳಕೆಯಿಂದ ದೂರವಿದ್ದು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಕೌಶಲ್ಯಾಭಿವೃದ್ಧಿ ಇದ್ದರೆ ಉದ್ಯೋಗ ಸಿಗುವುದು ಸುಲಭ. ಉದ್ಯೋಗ ಸಿಗದ ಅಭ್ಯರ್ಥಿಗಳು ತರಬೇತಿ ಪಡೆದು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.ಶಾಸಕರಾದ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಮೇಳದ ಮೂಲಕ ಹೆಚ್ಚಿನ ಯುವಕರಿಗೆ ಉದ್ಯೋಗ ದೊರೆಯಬೇಕು. ಕನಿ? ನೂರಕ್ಕೂ ಹೆಚ್ಚು ಮಂದಿಗೆ ನೇರವಾಗಿ ಉದ್ಯೋಗ ಕಲ್ಪಿಸುವ ಗುರಿ ಹೊಂದಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ಉದ್ಯೋಗ ಮೇಳಕ್ಕೆ ಈಗಾಗಲೇ ಆನ್‌ಲೈನ್ ಮೂಲಕ ಸುಮಾರು ೪ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲಿ ೩೦೦೦ ಸಾವಿರ ಯುವಕ ಯುವತಿಯರು ಭಾಗವಹಿಸಿದ್ದಾರೆ. ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ,ವಿಶೇಷ ಚೇತನರಿಗೆ ಶೇಕಡಾ ೫ರಷ್ಟು ಮೀಸಲಾತಿಯೂ ಕಲ್ಪಿಸಲಾಗಿದೆ ಎಂದು ಹೇಳಿದರು.
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಣ್ಣ ಮಾತನಾಡಿ ಒಂದೇ ಸೂರಿನಡಿಯಲ್ಲಿ ಹಲವು ಕಂಪನಿಗಳು ಭಾಗವಹಿಸಿರುವುದು ಯುವಕರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಆಯ್ಕೆಯಾದ ೫ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಗಿರೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.