ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಹೊಸಬೂದನೂರು ಗ್ರಾಮದಲ್ಲಿ 30 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಎಂದೂ ಹಿಂದೆ ಬಿದ್ದಿಲ್ಲ. ರಸ್ತೆ ಮತ್ತು ಚರಂಡಿಗಳು ಸರಿಯಾಗಿದ್ದರೆ ಗ್ರಾಮಗಳ ಅಭಿವೃದ್ಧಿಯಾದಂತೆ. ಇದನ್ನು ತಿಳಿದು ನನ್ನ ಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಫೆ.21ರಂದು ಆರಂಭವಾಗಲಿರುವ ಬೂದನೂರು ಉತ್ಸವದ ವೇಳೆಗೆ ರಸ್ತೆ ಕಾಮಗಾರಿ ಮುಗಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕೆಂದು ಹೇಳಿದರು.ಮಂಡ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ತರುತ್ತಿದ್ದೇನೆ. ಯಾವುದೇ ಕೆಲಸ ಮಾಡಬೇಕಾದರೂ ಇಚ್ಛಾಶಕ್ತಿ ಇರಬೇಕು. ನಿಮ್ಮ ಸಹಕಾರವಿದ್ದರೆ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಂತರ ಶ್ರೀಕಾಶಿವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಬೂದನೂರು ಗ್ರಾಪಂ ಅನುದಾನದಡಿ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಿದರು. ಅಲ್ಲದೇ, ಗರೀಬಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಶ್ರೀಮಾರಮ್ಮ ದೇವಸ್ಥಾನಕ್ಕೆ ಭೂಮಿ ಪೂಜೆ ನೆರವೇರಿಸಿ ಶಾಸಕರ ಅನುದಾನದಲ್ಲಿ 3 ಲಕ್ಷ ರು. ಬಿಡುಗಡೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡುವುದಾಗಿ ತಿಳಿಸಿದರು.ಗ್ರಾಪಂ ಅಧ್ಯಕ್ಷೆ ಮಾನಸ, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ಕೆಂಪೇಗೌಡ, ನಾಗೇಶ್, ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ. ಶಿವಾನಂದ, ಬೂದನೂರು ಸಹಕಾರ ಸಂಘದ ಅಧ್ಯಕ್ಷ ಬಿ.ಎನ್.ರಘು, ಮಾಜಿ ಅಧ್ಯಕ್ಷ ಮಂಜು, ಮುಖಂಡರಾದ ಜಯರಾಮು, ಚಂದ್ರಪ್ಪ, ಚೈತ್ರೇಶ್, ಮರೀಗೌಡ ಇತರರಿದ್ದರು.
ಬಳಿಕ ಶ್ರೀನಿವಾಸಪುರ ಗ್ರಾಮದಲ್ಲಿ 32 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದರು. ಉಮ್ಮಡಹಳ್ಳಿ ಗ್ರಾಮದ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿಗೆ 25 ಲಕ್ಷ ರು., ಬೆಳ್ಳುಂಡಗೆರೆ ಗ್ರಾಮದಲ್ಲಿ 4.50 ಲಕ್ಷ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಬಿಳಿದೇಗಲು ಗ್ರಾಮದಲ್ಲಿ 10 ಲಕ್ಷ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು.