ಕನ್ನಡಪ್ರಭ ವಾರ್ತೆ ಹಾಸನರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ 1,08,135 ಕೋಟಿ ರು.ವೆಚ್ಚ ಮಾಡಲಾಗಿದೆ. ಸರ್ಕಾರ ರಚನೆಗೊಂಡ ಒಂದು ವರ್ಷದೊಳಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಇದುವರೆಗೂ 600 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ದೇಶದಲ್ಲಿ ಈವರೆಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಾನತೆ ಬಂದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿರುವುದರಿಂದ ಸಮಾನತೆ ಬರುತ್ತಿಲ್ಲ. ಸಮಾಜದಲ್ಲಿ ಅಸಮಾನತೆ ಇದ್ದರೆ ಸ್ವಾತಂತ್ರ ಬಂದು ಏನೂ ಪ್ರಯೋಜನ ಇಲ್ಲ. ಈ ಅಸಮಾನತೆಯನ್ನು ಹೋಗಲಾಡಿಸಲೆಂದೇ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.ಇಂದು 132 ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ್ದೇವೆ. 166 ಕೋಟಿ ರು.ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ನೂರಾರು ಕೋಟಿ ರು.ಗಳ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಅತ್ಯಂತ ಸಂತೋಷದಿಂದ ನೇರವೇರಿಸಿದ್ದೇವೆ.ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾಗಿದ್ದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ದೇಶದಲ್ಲಿ ಸ್ಥಾಪನೆ ಮಾಡಿದ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ನಾನು ಈ ಹಿಂದೆ ಮಂತ್ರಿ ಆಗಿದ್ದಾಗ ಜಿಲ್ಲೆಯ ಗೊರೂರಿನ ಹೇಮಾವತಿ ಅಣೆಕಟ್ಟೆಗೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ಅಣೆಕಟ್ಟೆ ಮುಂದಿರುವ ವಿಶಾಲವಾದ ಜಾಗದಲ್ಲಿ ಉದ್ಯಾನವನ ನಿರ್ಮಾಣದ ಬಗ್ಗೆ ಚಿಂತನೆ ಮಾಡಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡರ ಒತ್ತಾಯದಂತೆ ಅಲ್ಲಿ ಉದ್ಯಾನವನ ನಿರ್ಮಾಣಕ್ಕೆ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.