- 19 ಕೇಂದ್ರಗಳಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ
- ಡಿಸಿ ಗಂಗಾಧರ ಸ್ವಾಮಿ, ಎಸ್ಪಿ ಡಾ.ಶೇಖರ್ ಖುದ್ದು ಉಸ್ತುವಾರಿ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ 19 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ಒಟ್ಟು 11,033 ಅಭ್ಯರ್ಥಿಗಳ ಪೈಕಿ 10,472 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 559 ಅಭ್ಯರ್ಥಿಗಳು ಗೈರಾಗಿದ್ದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳ ತಪಾಸಣೆ ಜೊತೆಗೆ ಇಎನ್‌ಟಿ ತಜ್ಞ ವೈದ್ಯರಿಂದ ಅಭ್ಯರ್ಥಿಗಳ ಕಿವಿಯಲ್ಲಿ ಅತ್ಯಾಧುನಿಕ ಯಂತ್ರ, ಬ್ಲೂಟೂತ್‌ಗಳನ್ನು ಇಟ್ಟುಕೊಂಡು, ಪರೀಕ್ಷಾ ಅಕ್ರಮ ನಡೆಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ಮಾಡಿದ ನಂತರವೇ ಕೇಂದ್ರದೊಳಗೆ ಪ್ರವೇಶ ನೀಡಲಾಯಿತು.
ಪರೀಕ್ಷಾ ವೀಕ್ಷಕರು, ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರೀಕ್ಷಾ ಪ್ರಕ್ರಿಯೆ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಕೇಂದ್ರಗಳಲ್ಲಿ ಫೇಷಿಯಲ್ ರೆಕಾಗ್ನಿಷನ್ ವ್ಯವಸ್ಥೆ ಅಳವಡಿಸಲಾಗಿತ್ತು. ಪ್ರತಿ ಅಭ್ಯರ್ಥಿಗಳ ಗುರುತು ಪರಿಶೀಲನೆಯು ಕಟ್ಟುನಿಟ್ಟಾಗಿ ನಡೆಯಿತು. ಸಿಸಿ ಟಿವಿ ಕ್ಯಾಮೆರಾಗಳು ಹಾಗೂ ಇತರೆ ತಾಂತ್ರಿಕ ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿದರು.
ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸಮೀಪದ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಕಡ್ಡಾಯವಾಗಿ ಮುಚ್ಚಿಸಲಾಗಿತ್ತು. ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ.ಶೇಖರ್ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದರು.
-2ಕೆಡಿವಿಜಿ6, 7: ದಾವಣಗೆರೆಯ ವಿವಿಧ ಪರೀಕ್ಷಾ ಕೇಂದ್ರವೊಂದರಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರೀಕ್ಷಾರ್ಥಿಗಳು ಕೇಂದ್ರ ಪ್ರವೇಶಿಸುತ್ತಿರುವುದನ್ನು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ವೀಕ್ಷಿಸಿದರು. -2ಕೆಡಿವಿಜಿ1, 2, 3: ದಾವಣಗೆರೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. -2ಕೆಡಿವಿಜಿ4: ದಾವಣಗೆರೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷಾರ್ಥಿಗಳನ್ನು ಇಎನ್‌ಟಿ ತಜ್ಞ ವೈದ್ಯರು ತಪಾಸಣೆ ನಡೆಸಿದರು.