ಸಾರ್ವಜನಿಕರ ಹಿತದೃಷ್ಟಿಯಿಂದ 100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆ: ಲಕ್ಷ್ಮಣ ಸವದಿ

KannadaprabhaNewsNetwork |  
Published : Aug 16, 2026, 03:30 AM IST
ಆಕರ್ಷಕ ಪಥಸಂಚಲನ ನಡೆಯಿತು. | Kannada Prabha

ಸಾರಾಂಶ

ರಾಜ್ಯದಲ್ಲಿ ಆಡಳಿತ ವ್ಯವಸ್ಥೆಗೆ ವೇಗ ನೀಡುವ ಜತೆಗೆ ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಮುಂದಿನ 100 ದಿನಗಳಲ್ಲಿ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ.

ಸ್ವಾತಂತ್ರ‍್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವಕನ್ನಡಪ್ರಭ ವಾರ್ತೆ ಕಾರವಾರ

ರಾಜ್ಯದಲ್ಲಿ ಆಡಳಿತ ವ್ಯವಸ್ಥೆಗೆ ವೇಗ ನೀಡುವ ಜತೆಗೆ ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಮುಂದಿನ 100 ದಿನಗಳಲ್ಲಿ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ‍್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ 100 ದಿನಗಳೊಳಗೆ 10 ಪ್ರಮುಖ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ರೈತ ಮಿತ್ರ–ಬಡವರ ಬಂಧು, ಗ್ರಾಮಾನುಭವ, ಯುವ ಯುಗ–ಯುವ ಕರ್ನಾಟಕ ನಿರ್ಮಾಣ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ ಇಲಾಖೆ, ಭೂ ಗ್ಯಾರಂಟಿ, ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್ ಹಾಗೂ ತೇಗದ ಸಿರಿ ಸೇರಿದಂತೆ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಯುವಂತೆ ಮತ್ತು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕೋಟ್ಯಂತರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 25 ಶಾಲೆಗಳನ್ನು ಗುರುತಿಸಲಾಗಿದೆ. ಸಿಎಸ್‌ಆರ್ ನಿಧಿಯಡಿ ಈ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಉದ್ಯಮಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶಾಲೆಗಳ ಸೌಲಭ್ಯಗಳನ್ನು ಸುಧಾರಿಸಲಾಗುವುದು ಎಂದು ಹೇಳಿದರು.

ಕೆಎಸ್‌ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಜಲಸಾರಿಗೆ ಮಂಡಳಿಯ ಸಿಇಓ ಬಾಲಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್, ಅರಣ್ಯ, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳಿಂದ 16 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾರತ್ ಜೋಡೋ ಯುವ ಮಿಷನ್ ಸದಸ್ಯತ್ವ ಕಾರ್ಡ್ ವಿತರಿಸಲಾಯಿತು. ಅರಣ್ಯ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ನಕ್ಷೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಡೈರೆಕ್ಟರಿಯನ್ನು ಬಿಡುಗಡೆ ಮಾಡಲಾಯಿತು.

ಬಾಲಮಂದಿರ ಪ್ರೌಢಶಾಲೆ ಮತ್ತು ಸೆಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ
ಸ್ವಾತಂತ್ರ್ಯದ ಮೌಲ್ಯ ಅರಿತು ಗ್ರಾಮಾಭಿವೃದ್ಧಿಗೆ ಶ್ರಮಿಸಿ