ಶಕ್ತಿ ಯೋಜನೆಯಡಿ 10 ಕೋಟಿ ಮಹಿಳೆಯರ ಪ್ರಯಾಣ: ರೆಡ್ಡಿ ಶ್ರೀನಿವಾಸ

KannadaprabhaNewsNetwork |  
Published : Dec 24, 2025, 02:30 AM IST
23ಕೆಪಿಎಲ್21ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ ಡಿಸೆಂಬರ್ ವರೆಗೆ ಹತ್ತು ಕೋಟಿ ಮಹಿಳೆಯರು ಉಚಿವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ರೆಡ್ಡಿ ಶ್ರೀನಿವಾಸ ಹೇಳಿದರು.

ಕೊಪ್ಪಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಈ ತಿಂಗಳ ಡಿಸೆಂಬರ್ ವರೆಗೆ ಹತ್ತು ಕೋಟಿ ಮಹಿಳೆಯರು ಉಚಿವಾಗಿ ಬಸ್‌ಗಳಲ್ಲಿ ಪ್ರಯಾಣಿಸಿದ್ದು, ಇದಕ್ಕಾಗಿ ಅಂದಾಜು ₹375 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದ್ದು, ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಪ್ರಗತಿ ಸಾಧಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ಹತ್ತು ಕೋಟಿ ದಾಟಿದ್ದು, ಇದರಿಂದ ಬಡ ಮತ್ತು ಸಾಮಾನ್ಯ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದರು.

ಪಂಚ ಗ್ಯಾರಂಟಿ ಕುರಿತು ಕಾಲೇಜು ಹಂತದಲ್ಲಿ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸರ್ಕಾರದ ಈ ಮಹತ್ವದ ಯೋಜನೆಗಳ ಬಗ್ಗೆ ಮತ್ತಷ್ಟು ಜನ ಸಾಮಾನ್ಯರಲ್ಲಿ ಪ್ರಚಾರ ಆಗುವಂತೆ ಕ್ರಮ ವಹಿಸಿ ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ನ್ಯಾಯ ಬೆಲೆ ಅಂಗಡಿಗಳಿಗೆ ಹೋಗಿ ಅಕ್ಕಿ ತರಲು ಸಾದ್ಯವಿಲ್ಲದ ಹಿರಿಯ ನಾಗರಿಕರ ಮನೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಲುಪಿಸಲು ನ್ಯಾಯ ಬೆಲೆ ಅಂಗಡಿಗಳ ಮಾಲೀಕರಿಗೆ ತಿಳಿಸಿ ಎಂದು ಅಧಿಕಾರಿಗೆ ಸೂಚನೆ ನೀಡಿದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ

ಗೃಹಲಕ್ಷ್ಮಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,19,665 ಫಲಾನುಭವಿಗಳಿಗೆ ಆಗಸ್ಟ್-2025ರ ಅಂತ್ಯ ದವರೆಗೆ ಡಿಬಿಟಿ ಮೂಲಕ ₹63,93,30,000 ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ನವೆಂಬರ್-2025ರ ಅಂತ್ಯದವರೆಗೆ 2,96,448 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ ₹326.02 ಕೋಟಿ ಖರ್ಚು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 36,002 ಅಂತ್ಯೋದಯ (ಎಎವೈ), 38,337 ಎನ್.ಪಿ.ಎಚ್.ಎಚ್. (ಬಿಪಿಎಲ್) ಮತ್ತು 2,81,886 ಪಿ.ಎಚ್.ಎಚ್ (ಬಿಪಿಎಲ್) ಕಾರ್ಡ್‌ಗಳಿದ್ದು, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2025ರ ಡಿಸೆಂಬರ್ ಮಾಹೆಯಿಂದ ಇಲ್ಲಿ ವರೆಗೂ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ.

ಶಕ್ತಿ ಯೋಜನೆಯಡಿ 2025ರ ನವೆಂಬರ್ ಮಾಹೆಯಲ್ಲಿ 10 ಕೋಟಿ ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹358,34,17,496 ಖರ್ಚಾಗಿದೆ ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ ಪ್ರಸ್ತುತ 11,945 ಫಲಾನುಭವಿಗಳು ನೋಂದಣಿಯಾಗಿದ್ದು, ಜುಲೈ ಅಂತ್ಯದ ವರೆಗೆ ಒಟ್ಟು ಮೊತ್ತ ₹19,25,97,000 ಕೋಟಿಗಳನ್ನು ಪಾವತಿಸಲಾಗಿದೆ. ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಈಗಾಗಲೇ 34 ಅಭ್ಯರ್ಥಿಗಳಿಗೆ 30 ದಿನದ ಡಾಟಾ ಎಂಟ್ರಿ ಆಪರೇಟರ್ ತರಬೇತಿ ನೀಡಲಾಗಿದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಎಸ್.ಬಿ. ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ ಮತ್ತು ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ