ಶಿಗ್ಗಾಂವಿ: ರಾಜ್ಯ ಸರ್ಕಾರ ಶಿಗ್ಗಾಂವಿ ತಾಲೂಕಿಗೆ ನೂರು ಕೋಟಿ ರು. ವಿಶೇಷ ಅನುದಾನ ಮಂಜೂರು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜನಸ್ಪಂದನ ಸಭೆಯಲ್ಲಿ ನಾಗರಿಕ ಸೌಲಭ್ಯ ಕೊರತೆ ದೂರುಗಳು ಅಧಿಕವಾಗಿದ್ದು, ಪರಿಹಾರ ಕ್ರಮಗಳನ್ನು ಕೈಗೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂಬ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆ: ಗ್ರಾಮಸ್ಥರ ಬೇಡಿಕೆಯಂತೆ ಶಿಗ್ಗಾಂವಿ ತಾಲೂಕಿನ ಬಿಸಲಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆ ಸೌಕರ್ಯ ಕಲ್ಪಿಸಲಾಗಿದೆ. ಹಾನಗಲ್ ಮತ್ತು ಹುಬ್ಬಳ್ಳಿ ಎರಡೂ ಘಟಕಗಳ ಬಸ್‌ಗಳಿಗೆ ನಿಲುಗಡೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈಗ ಹಾನಗಲ್ ಘಟಕದ ಬಸ್‌ಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಹುಬ್ಬಳ್ಳಿ ಘಟಕದ ಬಸ್‌ಗಳಿಗೂ ನಿಲುಗಡೆ ಕಲ್ಪಿಸಲು ಹಾವೇರಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.ಗ್ರಾಮಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯಮಾರಾಟ ನಡೆಯುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ನಾಲ್ಕು ತಂಡ ರಚನೆ ಮಾಡಿ ಅಬಕಾರಿ ದಾಳಿ ಆರಂಭಿಸಿದ್ದು, ೧೩ ಪ್ರಕರಣ ದಾಖಲಿಸಿಕೊಂಡು ೩೦ ಸಾವಿರ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.ಜನಸ್ಪಂದನ ಸಭೆಯಲ್ಲಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂಥ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಪುನಃ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.