ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿ ₹349ಕ್ಕೆ ಹೆಚ್ಚಳವಾಗಿದೆ. ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಕೆಲಸ ನೀಡಲಾಗುವುದು. ನರೇಗಾ ಕೂಲಿಕಾರರು ಗ್ರಾಮ ಪಂಚಾಯತಿಗಳಿಗೆ ಕೆಲಸದ ಬೇಡಿಕೆ ಅರ್ಜಿಗಳನ್ನು ಸಲ್ಲಿಸಿ ಯೋಜನೆಯ ಪಾಲುದಾರರಾಗಿ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ ಹೇಳಿದರು.ತಾಲೂಕಿನ ಬಸರಕೋಡ ಗ್ರಾಮ ಪಂಚಾಯತಿಯಲ್ಲಿ ಗ್ರಾಪಂ ಹಾಗೂ ತಾಲೂಕು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮ ಸಹಯೋಗದಲ್ಲಿ ಬುಧವಾರ ನಡೆದ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೂಲಿಕಾರರ ದಿನದ ಕೂಲಿ 316 ರಿಂದ 349ಕ್ಕೆ ಏರಿಕೆಯಾಗಿದೆ. ವರ್ಷಕ್ಕೆ 100 ದಿನ ಕೆಲಸ ಮಾಡಿದರೆ ₹34,900 ಕೂಲಿ ಹಣ ಪಡೆದುಕೊಳ್ಳಬಹುದು. ಗ್ರಾಮೀಣ ಕುಟುಂಬಗಳಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ಯೋಜನೆ ಬಗ್ಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ಪ್ರಚಾರ ಮಾಡಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೇರೇಪಿಸಬೇಕು. ಬರಗಾಲವನ್ನು ಸಮರ್ಥವಾಗಿ ಎದುರಿಸಲು ನರೇಗಾ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.ಸಹಾಯಕ ನಿರ್ದೇಶಕ (ಗ್ರಾ.ಉ.) ಪಿ.ಎಸ್.ಕಸನಕ್ಕಿ ಮಾತನಾಡಿ, ಬರದಿಂದ ಗ್ರಾಮೀಣ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸ್ಥಳೀಯವಾಗಿ ಅಕುಶಲ ಕೆಲಸ ಒಗಗಿಸಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಕೆಲಸ ಒದಗಿಸಿ ವಲಸೆ ತಡೆಯುವ ಉದ್ದೇಶದಿಂದ ಕೂಲಿ ಆಧಾರಿತ ಕಾಮಗಾರಿಗಳನ್ನು ಸೃಜಿಸಿ ಹೆಚ್ಚಿನ ಜನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲಾಗುತ್ತದೆ ಎಂದರು.
ಗ್ರಾಮ ಪಂಚಾಯತಿಯಲ್ಲಿ ಬೇಡಿಕೆಗೆ ಅನುಗುಣವಾಗಿ ಕಾಮಗಾರಿಗಳನ್ನು ಗುರುತಿಸಿ ಕೆಲಸ ನೀಡಿ. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಿ ಕೂಲಿಕಾರರಿಗೆ ಮೂಲ ಸೌಕರ್ಯಗಳನ್ನು ಒದಗಿಸಿ. ಕೂಲಿಕಾರರು ಬೆಳಿಗ್ಗೆ ಕೆಲಸಕ್ಕೆ ಹಾಜರಾಗಿ ನಿಗದಿಪಡಿಸಿದ ಅಳತೆಯನ್ನು ಪೂರ್ಣಗೊಳಿಸಿ ಬಿಸಿಲು ಹೆಚ್ಚಾಗುವುದರೊಳಗೆ ಮನೆಗೆ ತೆರಳಿ ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಮತದಾನ ಕುರಿತು ಜಾಗೃತಿ ಮೂಡಿಸಿ ಮೇ 7ರಂದು ತಪ್ಪದೇ ಮತದಾನ ಮಾಡುವಂತೆ ತಿಳಿಸಿ ಮತದಾನ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.
ಇದೇ ಸಂದರ್ಭದಲ್ಲಿ ತಾಪಂ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಪಿಡಿಒ ಭಾರತಿ ಸಿನ್ನೂರ, ಕಾರ್ಯದರ್ಶಿ ಆನಂದ, ಡಿಇಒ, ಬಿಎಫ್ ಟಿ, ಗ್ರಾ.ಪಂ ಸಿಬ್ಬಂದಿ ಹಾಜರಿದ್ದರು.