ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

KannadaprabhaNewsNetwork |  
Published : Jun 05, 2025, 12:58 AM IST
17 | Kannada Prabha

ಸಾರಾಂಶ

ಮೈಸೂರು ಜಿಲ್ಲೆಯಲ್ಲೂ ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು 44 ವಿದ್ಯುತ್‌ ಪ್ರಸರಣ ಉಪ ಕೇಂದ್ರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ವಿದ್ಯುತ್ ಸಮಸ್ಯೆ ಇಲ್ಲದಿದ್ದರೂ ಮೂಲ ಸೌಕರ್ಯ ಕೊರತೆಯಿಂದಾಗಿ ಪೂರೈಕೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ವಿದ್ಯುತ್ ಪ್ರಸರಣ ಉಪ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಸೆಸ್ಕ್ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಣಮಟ್ಟದ ವಿದ್ಯುತ್ ಪೂರೈಕೆ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲೂ ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು 44 ವಿದ್ಯುತ್‌ ಪ್ರಸರಣ ಉಪ ಕೇಂದ್ರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ವಿದ್ಯುತ್ ಸಮಸ್ಯೆ ಇಲ್ಲದಿದ್ದರೂ ಮೂಲ ಸೌಕರ್ಯ ಕೊರತೆಯಿಂದಾಗಿ ಪೂರೈಕೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ವಿದ್ಯುತ್ ಪ್ರಸರಣ ಉಪ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ ಎಂದರು.

ಪಂಪ್ ಸೆಟ್- ಅಕ್ರಮ ಸಕ್ರಮ:

ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿದ್ದ 4 ಲಕ್ಷ ಅಕ್ರಮ ಪಂಪ್ ಸೆಟ್ ಗಳ ಪೈಕಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಫೀಡರ್ ಗಳಿದ 500 ಮೀಟರ್‌ ಒಳಗಿನ ಪಂಪ್‌ ಸೆಟ್‌ ಗಳಿಗೆ ಇಲಾಖೆಯೇ ಟ್ರಾನ್ಸ್‌ ಫಾರ್ಮರ್‌ ಒದಗಿಸಲಿದೆ. 500 ಮೀಟರ್‌ ನಿಂದ ಹೊರಗಿನ ಪಂಪ್‌ ಸೆಟ್‌ ಗಳಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುತ್ತದೆ. ಅದೇ ರೀತಿ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕುಸುಮ್- ಸಿ ಯೋಜನೆಯಡಿ ಫೀಡರ್‌ ಸೌರೀಕರಣ ಮಾಡಲಾಗುತ್ತಿದೆ ಎಂದರು.

ಕುಸುಮ್-ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳ ಫೀಡರ್ ಸೋಲರೈಸೇಷನ್ ಮೂಲಕ 2400 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದೆ. ಇದೇ ತಿಂಗಳು ಗೌರಿಬಿದನೂರಿನ ತೊಂಡೆಭಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ವಿದ್ಯುತ್ ಘಟಕವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

10 ಎಚ್ ಪಿವರೆಗೆ ಉಚಿತ ವಿದ್ಯುತ್ ಮುಂದುವರಿಕೆ:

ಕೃಷಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ರೈತರಿಗೆ ಎಷ್ಟು ವಿದ್ಯುತ್ ಪೂರೈಸಲಾಗುತ್ತಿದೆ ಮತ್ತು ಎಷ್ಟು ಸಂಪರ್ಕಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯ ಹಮ್ಮಿಕೊಳ್ಳಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ 10 ಎಚ್ ಪಿ ವರೆಗೆ ಉಚಿತ ವಿದ್ಯುತ್ ಮುಂದುವರಿಯುವುದರ ಜೊತೆಗೆ 7 ಗಂಟೆ ಸಮರ್ಪಕ ವಿದ್ಯುತ್ ಕೂಡ ಪೂರೈಕೆಯಾಗಲಿದೆ. ಇದರಲ್ಲಿ ಅನುಮಾನ ಬೇಡ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ಇತ್ತೀಚೆಗೆ ಹಾಡಿಗಳಿಗೆ ಭೇಟಿ ನೀಡಿದ ಬಳಿಕ ಅವುಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ. 600 ಹೆಚ್ಚು ಹಾಡಿ ಮನೆಗಳಿಗೆ ವಿದ್ಯುತ್‌ ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದರು.ಮೈಸೂರು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಶೇ.99 ರಷ್ಟು ಯಶಸ್ವಿಯಾಗಿದೆ. ಗೃಹಜ್ಯೋತಿ ಯೋಜನೆಯಿಂದ ವಾರ್ಷಿಕ 9000 ಕೋಟಿ ರೂ. ಎಲ್ಲಾ ಎಸ್ಕಾಂಗಳಿಗೆ ರಾಜ್ಯ ಸರ್ಕಾರದಿಂದ ಬರುತ್ತಿದೆ. ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ ಕೆಟ್ಟು ಹೋದರೆ ನಗರ ಪ್ರದೇಶದಲ್ಲಿ 24 ಗಂಟೆಯೊಳಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 48 ಗಂಟೆಯೊಳಗೆ ಸರಿ ಪಡಿಸಲಾಗುವುದು.

- ಕೆ.ಜೆ. ಜಾರ್ಜ್, ಇಂಧನ ಸಚಿವಅರಣ್ಯದಂಚಿನ ಪ್ರದೇಶಗಳಲ್ಲಿ ಹಗಲಿನ ವೇಳೆ ವಿದ್ಯುತ್‌ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ವನ್ಯಜೀವಿ ಸಂಘರ್ಷ ಇರುವೆಡೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.

- ಗೌರವ್ ಗುಪ್ತ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು