ಕನ್ನಡಪ್ರಭ ವಾರ್ತೆ ಹಾಸನ
ಕಾಫಿ ಬೆಳೆಯುವ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಬೆಳೆಗಾರರು ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಭಾರತದ ಕಾಫಿಯ ವೈಶಿಷ್ಟ್ಯತೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವ ಧ್ಯೇಯ ಹೊಂದಿ ದಿನಾಂಕ ೦೧-೧೦-೨೦೨೪ನೇ ಮಂಗಳವಾರದಂದು ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮವನ್ನು ಸಾಂಸ್ಕೃತಿಕ ನಗರಿ ಮೈಸೂರಿನ ಆರಮನೆ ಆವರಣದ ಉತ್ತರ ಬಲರಾಮ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾಗಿದೆ. ರಾಜ ಮನೆತನದ ಹಾಗೂ ಮೈಸೂರು ಜಿಲ್ಲೆ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಹಾಗೂ ಜೆ.ಎಸ್.ಎಸ್ ಮಹಾಸಂಸ್ಥಾನ ಮಠದ ಮಠಾಧ್ಯಕ್ಷರಾದ ಜಗದ್ಗುರು ಡಾ.ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಯವರು, ಆದಿಚುಂಚನಗಿರಿ ಮಠದ ಕಾರ್ಯದರ್ಶಿಗಳಾದ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಗೌರವ ಉಪಸ್ಥಿತರಿರಲಿದ್ದಾರೆ ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷರಾದ ಶ್ರೀ ಎ.ಎಸ್ ಪರಮೇಶ್‌ರವರು ವಹಿಸಲಿದ್ದಾರೆ, ಹಾಸನ, ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರುಗಳು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಸಂಸದರು , ಶಾಸಕರು ಮತ್ತು ಕಾಫಿ ಮಂಡಳಿಯ ಅಧ್ಯಕ್ಷರಾದ ಎಂ.ಜೆ. ದಿನೇಶ್, ಸಿ.ಇ.ಒ ರವರಾದ ಡಾ. ಕೆ.ಜಿ. ಜಗದೀಶ್, ಸದಸ್ಯರು ಹಾಗೂ ಕೆ.ಜಿ.ಎಫ್‌ನ ಅಧ್ಯಕ್ಷರಾದ ಡಾ. ಎಚ್.ಟಿ ಮೋಹನ್ ಕುಮಾರ್‌ರವರು, ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಯವರು, ಪೊಲೀಸ್ ಕಮಿಷನರ್‌ರವರು, ಉಪರಣ್ಯ ಸಂರಕ್ಷಣಾಧಿಕಾರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಲೆನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸುಮಾರು ೧೫,೦೦೦-೦೦ ಜನ ಕಾಫಿ ಪ್ರಿಯರಿಗೆ ಉಚಿತ ಪರಿಶುದ್ಧ ಕಾಫಿಯನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಎ.ಎಸ್. ಪರಮೇಶ್, ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಶೇಖರ್, ಖಜಾಂಚಿ ಎಂ.ಜೆ. ಸಚೀನ್, ಗಿರೀಶ್ ಇತರರು ಉಪಸ್ಥಿತರಿದ್ದರು.