ಸಿದ್ದಗಂಗಾ ಶ್ರೀಗಳ 117ನೇ ಜನ್ಮದಿನಾಚರಣೆ ಸಂಭ್ರಮ

KannadaprabhaNewsNetwork |  
Published : Apr 02, 2024, 01:04 AM ISTUpdated : Apr 02, 2024, 05:50 AM IST
ರುದ್ರಾಕ್ಷಿ ಮಂಟಪದಲ್ಲಿ ಮೆರವಣಿಗೆ | Kannada Prabha

ಸಾರಾಂಶ

ನಾಡಿನ ಭಕ್ತಾದಿಗಳ ಮನ-ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮಜಯಂತಿ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.

 ತುಮಕೂರು : ನಾಡಿನ ಭಕ್ತಾದಿಗಳ ಮನ-ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮಜಯಂತಿ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.

ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಹರ-ಗುರು-ಚರಮೂರ್ತಿಗಳ ಸಮ್ಮುಖ ರುದ್ರಾಭಿಷೇಕ, 108 ಅಷ್ಟೋತ್ತರ ಸೇರಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿತು.

ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರು ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಹಣ್ಣುಗಳು, ಪುಷ್ಪಗಳಿಂದ ಅಲಂಕರಿಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

ಪುತ್ಥಳಿ ಮೆರವಣಿಗೆ: ಗದ್ದುಗೆ ಮಂದಿರದ ಮುಂಭಾಗದಿಂದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ದಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆದವು. ಶ್ರೀಮಠದ ಆವರಣದಲ್ಲಿ ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಕಳಸ ಹೊತ್ತ ಸುಮಂಗಲಿಯರು, ಹರಗುರುಚರಮೂರ್ತಿಗಳು, ಭಕ್ತಾದಿಗಳು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಗದ್ದುಗೆ ದರ್ಶನ ಪಡೆದ ಗಣ್ಯರು: ಬೆಳಗ್ಗೆಯಿಂದಲೇ ಶ್ರೀಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬಂತು. ಹರಿದ್ವಾರ ಪತಂಜಲಿ ಯೋಗಪೀಠದ ಬಾಬಾ ರಾಮ್‌ದೇವ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ವಿ.ಸೋಮಣ್ಣ, ಸಂಸದ ಜಿ.ಎಸ್. ಬಸವರಾಜು, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಡಾ. ಮಂಜುನಾಥ್, ರುದ್ರೇಶ್, ಡಾ. ಪರಮೇಶ್ ಸೇರಿದಂತೆ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ರಾತ್ರಿ 11ರ ವರೆಗೂ ದಾಸೋಹ: ಶ್ರೀಗಳ ಜನ್ಮದಿನದ ಅಂಗವಾಗಿ ಬೆಳಗ್ಗೆ 7 ಗಂಟೆಯಿಂದ ಶ್ರೀಮಠದಲ್ಲಿ ದಾಸೋಹ ಆರಂಭವಾಗಿದ್ದು, ರಾತ್ರಿ 11 ಗಂಟೆಯವರೆಗೂ ನಡೆಯಿತು. -ಬಾಕ್ಸ್‌-

117 ಮಕ್ಕಳಿಗೆ ನಾಮಕರಣ

ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ವತಿಯಿಂದ ನಡೆದಾಡುವ ದೇವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯುತ್ಸವದ ಅಂಗವಾಗಿ 117 ಮಕ್ಕಳಿಗೆ "ಶಿ " ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು. ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!