14 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಆರಂಭ

KannadaprabhaNewsNetwork |  
Published : Jun 12, 2024, 12:33 AM IST
ಪೊಟೋ: 11ಎಸ್ಎಂಜಿಕೆಪಿ03ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯಲ್ಲಿ ಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿದರು.  | Kannada Prabha

ಸಾರಾಂಶ

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯಲ್ಲಿ ಜೂ.14 ರಿಂದ 22ರವೆಗೆ 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, 9 ದಿನಗಳ ಕಾಲ ಪರೀಕ್ಷೆಗಳು ನಡೆಯಲಿದ್ದು, ಇದಕ್ಕಾಗಿ ಭದ್ರಾವತಿ 2, ಹೊಸನಗರ 1, ಸಾಗರ 1, ಶಿಕಾರಿಪುರ 1, ಶಿವಮೊಗ್ಗ 3, ಸೊರಬ 1, ತೀರ್ಥಹಳ್ಳಿ 1 ಸೇರಿ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ ಎಂದರು.

ಪರೀಕ್ಷೆಗೆ ಪುನರಾವರ್ತಿತ ವಿದ್ಯಾರ್ಥಿಗಳು 2091, ಖಾಸಗಿ ಪುನರಾವರ್ತಿತ 171 ಮತ್ತು ಫಲಿತಾಂಶ ಸುಧಾರಣೆಗಾಗಿ 249 ಸೇರಿ ಒಟ್ಟು 2511 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪ್ರಥಮ ಭಾಷೆಗೆ 1215, ದ್ವಿತೀಯ ಭಾಷೆಗೆ 1549, ತೃತೀಯ ಭಾಷೆಗೆ 1409, ಗಣಿತ 1785, ವಿಜ್ಞಾನ 2035 ಮತ್ತು ಸಮಾಜ ವಿಜ್ಞಾನ ವಿಷಯಕ್ಕೆ 1435 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳು ಹಾಗೂ ಆಸನ, ಪೀಠೋಪಕರಣಗಳ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹೇಳಿದರು. ಈಗಾಗಲೇ ಪ್ರತಿ ಕೇಂದ್ರಗಳಿಗೆ 10 ಜನ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 7 ಮಾರ್ಗಗಳಿಗೆ 7 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅನ್ಯ ಇಲಾಖಾ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಯಾವುದೇ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಪರೀಕ್ಷಾ ಸಂಬಂಧ ಪೊಲೀಸ್ ಬಂದೋಬಸ್ತ್, ಆರೋಗ್ಯ ಸಹಾಯಕರ ನೇಮಕಕ್ಕೆ ಕೋರಲಾಗಿದ್ದು, ಜಿಲ್ಲಾ, ತಾಲೂಕು ಖಜಾನೆಗಳಿಗೆ ಭದ್ರತಾ ಕೊಠಡಿ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ. ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಜಿಪಂ ಸಿಇಒ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಡಿಡಿಪಿಐ ಪರಮೇಶ್ವರಪ್ಪ ಮಾತನಾಡಿ, ಪರೀಕ್ಷೆಗೆ ನಿಯೋಜನೆಗೊಂಡ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ವೀಕ್ಷಕರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ವಿವರಿಸಿದರು. ಸಭೆಯಲ್ಲಿ ಎಎಸ್‍ಪಿ ಅನಿಲ್ ಕುಮಾರ್ ಭೂಮರಡ್ಡಿ, ಜಿಪಂ ಉಪ ಕಾರ್ಯದರ್ಶಿ ಸುಜಾತ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಯಟ್ ಪ್ರಾಚಾರ್ಯ ಬಸವರಾಜ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!