೧೫ ಕೋಟಿ ರು. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಕೃಷಿ ಸಚಿವ ಚಲುವರಾಯಸ್ವಾಮಿ

KannadaprabhaNewsNetwork | Published : Feb 7, 2024 1:52 AM

ಸಾರಾಂಶ

ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರಾಜ್ಯ ಸರ್ಕಾರವೇ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ₹೧೫ ಕೋಟಿ ಸಾಲ ವಿತರಣೆ ಮಾಡಲಾಗುತ್ತಿದೆ. ಮಹಿಳೆಯರು ಇದರ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಮಂಗಳವಾರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯ್ತಿಯಿಂದ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಡಿಸಿಸಿ ಬ್ಯಾಂಕ್‌ನಿಂದ ಮಹಿಳಾ ಸಂಘಗಳಿಗೆ ಸಾಲ ವಿತರಣೆ ಕಾರ್ಯಕ್ತಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಇದರೊಂದಿಗೆ ಅಭಿವೃದ್ಧಿಯಲ್ಲೂ ಹಿಂದೆ ಉಳಿದಿಲ್ಲ. ವಿವಿಧ ಇಲಾಖೆಯ ಮೂಲಕ ರಸ್ತೆ ಅಭಿವೃದ್ಧಿಗೆ ಪ್ರತಿ ಜಿಲ್ಲೆಗೆ ₹೫೦ ಕೋಟಿ ಅನುದಾನ ನೀಡಲಾಗಿದೆ ಎಂದರು.

ಬಡವರ ಕೈ ಬಲಪಡಿಸಲು ಗ್ಯಾರಂಟಿ ಯೋಜನೆ ಜಾರಿ; ಕೃಷ್ಣಬೈರೇಗೌಡ

ಬಡವರಿಗೆ, ರೈತರಿಗೆ, ಮಹಿಳೆಯರಿಗೆ ಶಕ್ತಿ ನೀಡುವುದೇ ಸರ್ಕಾರದ ಉದ್ದೇಶವಾಗಿದ್ದು, ನಿಮ್ಮ ಕೈ ಬಲಪಡಿಸಲು ಐದು ಗ್ಯಾರಂಟಿ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಸಂಸಾರದ ಆಧಾರ ಮಹಿಳೆ ಎಂಬುದನ್ನು ಮನಗಂಡ ಸರ್ಕಾರ ಮಹಿಳೆಯರಿಗೆ ಗೃಹ ಲಕ್ಷ್ನಿ ಯೋಜನೆಯನ್ನು ಜಾರಿ ಮಾಡಿ ಮಹಿಳೆಯರನ್ನು ಆರ್ಥಿಕವಾಗಿ ಸದೃಢ ಮಾಡಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಮಹಿಳೆಯರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರಬಂದು ಕುಟುಂಬವನ್ನು ಮುನ್ನಡೆಸಿ ಸಮಾಜದಲ್ಲಿ ನಿರ್ಭೀತಿಯಿಂದ ಬದುಕುತ್ತಿದ್ದಾರೆ ಎಂದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಉಪಯುಕ್ತವಾಗಿದ್ದು, ಸರ್ಕಾರ ಮನೆ ಬಾಗಲಿಗೆ ಯೋಜನೆಗಳನ್ನು ತಲುಪಿಸಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಉಳುವವರಿಗೆ ಭೂಮಿ ಎಂದು ರೈತರ ಪರವಾಗಿ ನಿಂತರು. ಅವರು ಸದಾ ಎಲ್ಲರಿಗೂ ಮಾದರಿ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this article