ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಹಲವೆಡೆ ಎಗ್ಗಿಲ್ಲದೆ ನಡೆಯುತ್ತಿರುವ ಐಪಿಎಲ್ ಬೆಟ್ಟಿಂಗ್, ಅಕ್ರಮ ಜೂಜಾಟ, ಹುಕ್ಕಾಬಾರ್, ಕ್ಯಾಸಿನೋ ಸೇರಿದಂತೆ ಹಲವು ಅಕ್ರಮ ದಂಧೆಗಳಿಗೆ ಕಡಿವಾಣ ಹಾಕುವುದಕ್ಕೆ ಮುಂದಿನ ೧೫ ದಿನಗಳೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಪ್ರಗತಿಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ತುರ್ತು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು, ಜೂಜು ದಂಧೆಗಳ ಬಗ್ಗೆ ಸಾಮಾನ್ಯವಾಗಿ ತಿಳಿಸಿದರೆ ಸಾಲದು. ನಿರ್ದಿಷ್ಟವಾಗಿ ಇಂತಹ ಕಡೆಗಳಲ್ಲಿ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಅಧಿಕಾರಿಗಳು ಭರವಸೆ ನೀಡಿದರು.
ಇದಕ್ಕೆ ರಾಜಣ್ಣ ಎಂಬುವರು ಮಾತನಾಡಿ, ಬೆಟ್ಟಿಂಗ್ ದಂಧೆಗೆ ಪ್ರೇರೇಪಿಸುತ್ತಿದ್ದ ನಾಗೇಂದ್ರ ಎಂಬುವನ ವಿರುದ್ಧ ಕಳೆದ ೪ ತಿಂಗಳ ಹಿಂದೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ, ಆದರೆ ಪೊಲೀಸರು ಎಫ್‌ಐಆರ್ ದಾಖಲು ಮಾಡದೆ, ಕೇವಲ ಎನ್‌ಸಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು. ಆನಂತರ ನಡೆದ ಬೆಳವಣಿಗೆಯಲ್ಲಿ ದಂಧೆಯಲ್ಲಿ ಶಾಮೀಲಾಗಿದ್ದ ನಾಗೇಂದ್ರ ತಮ್ಮ ಮಗ ಪ್ರೀತಂ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡೆ, ಪ್ರೀತಂ ಬಳಿ ಇರುವ ಮೊಬೈಲನ್ನು ವಶಕ್ಕೆ ಪಡೆದು ಹಣದ ವಹಿವಾಟನ್ನು ಪರಿಶೀಲಿಸಿ ನಾಗೇಂದ್ರನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದರು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನಾಗೇಂದ್ರನ ಮೇಲೆ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.ಈ ಹಿಂದೆ ಬೆಟ್ಟಿಂಗ್ ದಂಧೆಯಲ್ಲಿ ಹಿನ್ನೆಲೆಯಲ್ಲಿ ಮಧು ಮತ್ತು ಅಭಿಷೇಕ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ಎಫ್‌ಐಆರ್ ಕೂಡ ದಾಖಲಾಗಿತ್ತು. ಆದರೆ, ದೋಷಾರೋಪ ಪಟ್ಟಿಯಲ್ಲಿ ಸ್ಥಳೀಯ ಗ್ರಾಪಂ ಸದಸ್ಯನಾಗಿದ್ದ ಮಧು ಎಂಬುವನ ಹೆಸರನ್ನು ಕೈಬಿಡಲಾಗಿತ್ತು ಎಂದು ವಕೀಲ ಕಿಶೋರ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ, ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದಾಗ, ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ ಹೇಗೆ ವಿಚಾರಣೆ ನಡೆಸುತ್ತೀರಿ ಎಂದು ಮರುಪ್ರಶ್ನೆ ಹಾಕಿದರು. ಇದಕ್ಕೆ ಎಸ್ಪಿ, ಹೆಚ್ಚುವರಿ ದೋಷಾರೋಪಣ ಪಟ್ಟಿ ತಯಾರಿಸಲು ಅವಕಾಶವಿದೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಾಲ ಕೊಟ್ಟು ದಂಧೆಗೆ ಕುಮ್ಮಕ್ಕು:ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆ ಮಾಡುವವರು ತಾವೇ ಬಡ್ಡಿಗೆ ಹಣವನ್ನು ನೀಡಿ, ಬಲಿಪಶುಗಳಿಂದ ಖಾಲಿ ಚೆಕ್‌ಗಳನ್ನು ಪಡೆದುಕೊಂಡು, ಮುಂದಿನ ದಿನಗಳಲ್ಲಿ ವೈಮನಸ್ಸು ಉಂಟಾದಾಗ, ಇದು ಬೆಟ್ಟಿಂಗ್ ದಂಧೆಯಲ್ಲ, ಹಣದ ವ್ಯವಹಾರ ಎಂದು ಪ್ರಕರಣವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಕುಮಾರ ತಿಳಿಸಿದರು.
ಸಭೆಯಲ್ಲಿ ಅಲ್ ಇಂಡಿಯ ಲಾಯರ್ಸ್ ಯುನಿಯನ್ ಅಧ್ಯಕ್ಷ ಬಿ.ಟಿ.ವಿಶ್ವನಾಥ್, ಕಿಶೋರ್, ಸಚಿನ್, ಕರುನಾಡು ಸೇವಕರು ಸಂಘಟನೆ ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಚಂದ್ರು, ಸಿಐಟಿಯು ಸಿ.ಕುಮಾರಿ, ಬೂದನೂರು ಸತೀಶ್, ಕರವೇ ಎಚ್.ಡಿ.ಜಯರಾಂ, ವೇಣುಗೋಪಾಲ್ ಸೇರಿದಂತೆ ಬೂದನೂರು ಗ್ರಾಮಸ್ಥರು ಭಾಗವಹಿಸಿದ್ದರು.ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ:
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆಗೆ ಸಿಲುಕಿ ಯುವಕನೊಬ್ಬ ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ನೋವಿನ ಸಂಗತಿ. ಅಕ್ರಮ ಬೆಟ್ಟಿಂಗ್‌ನಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಜೂಜು ಹಾಗೂ ಕ್ರಿಕೆಟ್ ಬೆಟ್ಟಿಂಗ್ ದಂಧೆಯು ಯುವಕರನ್ನು ದಾರಿ ತಪ್ಪಿಸುತ್ತಿದ್ದು, ಅವರನ್ನು ಸಾಲದ ಸುಳಿಯಲ್ಲಿ ಸಿಲುಕುವಂತೆ ಮಾಡುತ್ತಿದೆ. ಜನಪರ ಸಂಘಟನೆಗಳು ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಿ ಜೂಜು ಹಾಗೂ ಬೆಟ್ಟಿಂಗ್‌ಗಳಿಂದ ದೂರವಿಡುವಂತೆ ಸಲಹೆ ನೀಡಿದರು.ಜಿಲ್ಲೆಯಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಬೆಟ್ಟಿಂಗ್, ಇಸ್ಪೀಟು ಹಾಗೂ ಯಾವುದೇ ರೀತಿಯ ಜೂಜುಗಳ ಬಗ್ಗೆ ಮಾಹಿತಿ ಅಥವಾ ದೂರು ನೀಡಲು ಪೊಲೀಸ್ ಇಲಾಖೆಯಿಂದ ಸಹಾಯವಾಣಿಯನ್ನು ತೆರೆಯಲಾಗುವುದು. ದೂರುದಾರರ ಹೆಸರನ್ನು ಗೌಪ್ಯವಾಗಿಡುವಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಯ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್, ಇನ್ನಾವುದೇ ಜೂಜುಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಲಾಗುವುದು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್.ನಾಗರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಪಂ ಉಪ ಕಾರ್ಯದರ್ಶಿ ಆನಂದ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಇದ್ದರು.