ಬೆಂ.ಗ್ರಾ ಜಿಲ್ಲೆಯಲ್ಲಿ 164 ಜೀತದಾಳುಗಳು ಮುಕ್ತ

KannadaprabhaNewsNetwork |  
Published : Feb 27, 2026, 01:30 AM IST
ಬೆಂ.ಗ್ರಾ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಗುರುವಾರ ನಡೆದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ: ಒಂದು ದಿನದ ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಉದ್ಘಾಟಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 164 ಜನರನ್ನು ಜೀತಮುಕ್ತಗೊಳಿಸಿದೆ. ಆ ಪೈಕಿ 157 ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 164 ಜನರನ್ನು ಜೀತಮುಕ್ತಗೊಳಿಸಿದೆ. ಆ ಪೈಕಿ 157 ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ " ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀತ ಪದ್ದತಿಯಂತಹ ಸಾಮಾಜಿಕ ಪಿಡುಗು ಕೆಲವು ಭಾಗಗಳಲ್ಲಿ ಇಂದಿಗೂ ಜೀವಂತವಾಗಿದೆ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮನ್ವಯತೆಯಿಂದ ಜೀತ ಪದ್ದತಿಯ ನಿರ್ಮೂಲನೆ ಮಾಡಲು ಸಾಧ್ಯ. ಹಿಂದೆ ಜೀತ ಪದ್ಧತಿಯು ಹೆಚ್ಚಾಗಿ ಕಂಡು ಬರುತ್ತಿತ್ತು. ಕಾಲಕ್ರಮೇಣ ಕಡಿಮೆ ಆಗುತ್ತಿದೆ. ಆದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ ಎಂದು ಹೇಳಿದರು.

ಶಿಕ್ಷಣ, ಕಾನೂನು, ಜಾಗೃತಿ, ಸಮಾನತೆಯಿಂದ ಜೀತ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು, ಸ್ವಯಂ ಸೇವಕ ಸಂಘಗಳು, ಸಮುದಾಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜೀತ ಪದ್ಧತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಅಥವಾ ಬಲವಂತವಾಗಿ ದುಡಿಸಿಕೊಳ್ಳುವ ಪರಿಸ್ಥಿತಿ ಕಂಡು ಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದರು.

ಜಿಲ್ಲೆಯನ್ನು 2020ರಲ್ಲಿ ಜೀತ ಮುಕ್ತ ಎಂದು ಘೋಷಿಸಲಾಗಿದ್ದು, ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ದಾಳುಗಳಿಗೆ ತಲಾ 20,000 ರು.ಗಳಂತೆ 31.40 ಲಕ್ಷ ರು.ಗಳು ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ವಸತಿ ಒದಗಿಸಲಾಗಿದೆ. 54 ಜನರಿಗೆ ನರೇಗಾ ಜಾಬ್ ಕಾರ್ಡ್, 156 ಜನರಿಗೆ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ ನೀಡಲಾಗಿದೆ ಎಂದು ತಿಳಿಸಿದರು.

ಶಾಶ್ವತ ಪುನರ್ವಸತಿ ಕಲ್ಪಿಸುವ ಸಂಬಂಧ ಜೀತ ವಿಮುಕ್ತರಿಗೆ ಎಕರೆ ಭೂಮಿಯನ್ನು ಉಚಿತವಾಗಿ ನೀಡಲು ಕೋರಿ ಜಿಲ್ಲಾಧಿಕಾರಿ ಪತ್ರ ಬರೆಯಲಾಗಿದೆ. ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ (ಫಲಾನುಭವಿ ಆಧಾರಿತ) ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಕಿರಣ ಕಮಲ ಪ್ರಸಾದ ಮಾತನಾಡಿ, ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ , ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮೇಲುಸ್ತುವರಿ ಸಮಿತಿ ಸದಸ್ಯ ಮ್ಯಾತ್ಯು ಮುನಿಯಪ್ಪ, ಜಿಲ್ಲಾ ಹಾಗೂ ತಾಲೂಕು ಮಟ್ಟದ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

26ಕೆಡಿಬಿಪಿ1-

ಬೆಂ.ಗ್ರಾ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಉದ್ಘಾಟಿಸಿದರು. ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮೇಲುಸ್ತುವರಿ ಸಮಿತಿ ಸದಸ್ಯ ಮ್ಯಾತ್ಯು ಮುನಿಯಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಜಿಲ್ಲೆಯ ರೈಲ್ವೆ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ವಿ,ಸೋಮಣ್ಣ